1,090 ಕೋಟಿ ಪಾವತಿಸದ ಕೇಂದ್ರ: ಕೃಷ್ಣ ಭೈರೇ ಗೌಡ

 

ಕಾರವಾರ :ನರೇಗಾ ಯೋಜನೆ ಅಡಿಯಲ್ಲಿ ಕೂಲಿಕಾರ್ಮಿಕರಿಗೆ ರಾಜ್ಯ ಸರ್ಕಾರ ಪಾವತಿಸಿದ್ದ 1,090 ಕೋಟಿ ರೂ. ಕೇಂದ್ರ ಸರ್ಕಾರ ಇನ್ನೂ ಪಾವತಿಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೃಷ್ಣ ಭೈರೇ ಗೌಡ ಹೇಳಿದರು.

ಅವರು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಹಾಗೂ ಅಂಕೋಲಾ ತಾಲೂಕಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಳೆದ ಎರಡು ವರ್ಷಗಳ ಹಿಂದೆ ನರೇಗಾ ಕೂಲಿ ಕಾರ್ಮಿಕರಿಗೆ ಮೂರ್ನಾಲ್ಕು ತಿಂಗಳು ಸಂಬಳ ನೀಡಲು ಅನಾನುಕೂಲ ಆಗಿತ್ತು. ಆದರೆ ಅವರಿಗೆ ಸಮಸ್ಯೆ ಆಗಬಾರದು ಎಂದು ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದಲೇ ಹಣ ಪಾವತಿಸಲಾಗಿದೆ. ಆದರೆ ಒಂದು ವರ್ಷ ಕಳೆದರೂ ರಾಜ್ಯ ಸರ್ಕಾರ ಭರಿಸಿದ ಹಣವನ್ನು ಕೇಂದ್ರ ಸರ್ಕಾರ ವಾಪಸ್ ಮಾಡಿಲ್ಲ. ಕೇಂದ್ರ ತ್ವರಿತವಾಗಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದೇವೆ.

ಪರಿಶಿಷ್ಠ ಜಾತಿ ಮತ್ತು ಪಂಗಡದ ಸರ್ಕಾರ ನೌಕರರ ಮುಂಬಡ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದೇವೆ. ಇದಕ್ಕೆ ನಾವು ಬದ್ಧರಾಗಿದ್ದೇವೆ. ಅದಕ್ಕೆ ಸಂಬಂಧಪಟ್ಟ ಬೇರೆ ಪ್ರಕರಣವೊಂದರ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಪರಿಣಾಮ ಮುಂಬಡ್ತಿ, ಹಿಂಬಡ್ತಿಯ ಮೇಲೆ ಬೀರಲಿದೆ. ಅಲ್ಲಿಯ ತೀರ್ಪು ಬರೋವರೆಗೆ ಮಧ್ಯದಲ್ಲಿ ಏನು ಮಾಡೋದು ಸೂಕ್ತವಲ್ಲ ಎಂದು ಅಡ್ವೋಕೇಟ್ ಜನರಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದು ಡಿಪಿಆರ್ ವ್ಯಾಪ್ತಿಗೆ ಬರುವುದರಿಂದ ಅಲ್ಲಿನ ತೀರ್ಪು ಬರುವವರೆಗೂ ಕಾಯುತ್ತೇವೆ ಎಂದರು‌.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಬಳಿಕ ಕಾರವಾರದ ಜಿಪಂನಲ್ಲಿ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.