ಶಿಕ್ಷಣದಿಂದ ಜನತೆಯಲ್ಲಿ ಸಾಮಾಜಿಕ ಅರಿವು ಮೂಡಿಸಲು ಸಾಧ್ಯ: ಜಯಶ್ರೀ ಮೊಗೇರ

ಕಾರವಾರ: ಎಲ್ಲರಿಗೂ ಶಿಕ್ಷಣ ಒದಗಿಸಿದರೆ ಮಾತ್ರ ಜನಸಂಖ್ಯೆ ಹೆಚ್ಚಳದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಸಾಧ್ಯವಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಗುರುವಾರ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನಸಂಖ್ಯೆ ಹೆಚ್ಚಳದ ದುಷ್ಪರಿಣಾಮಗಳ ಬಗ್ಗೆ ಗ್ರಾಮೀಣ ಜನತೆಯಲ್ಲಿ ಅರಿವು ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದರು. ಜನಸಂಖ್ಯಾ ಹೆಚ್ಚಳದಿಂದ ನಿರುದ್ಯೋಗ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಂಟಾಗುತ್ತವೆ. ಎಲ್ಲರಿಗೂ ಉತ್ತಮ ಆರೋಗ್ಯ, ಶಿಕ್ಷಣ, ವಸತಿ, ಉದ್ಯೋಗ ಇತ್ಯಾದಿಗಳನ್ನು ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದರು.

ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಎಮ್ ನಾಯ್ಕ ಅವರು ಮಾತನಾಡಿ, ಜನಸಂಖ್ಯೆಯ ತೀವ್ರಗತಿಯ ಹೆಚ್ಚಳ ಕಳವಳಕಾರಿ. ಜನಸಂಖ್ಯೆ ಬೆಳವಣಿಗೆಯಲ್ಲಿ ಸ್ಥಿರತೆಯನ್ನು ಸಾಧಿಸಬೇಕಾಗಿದೆ. ಇದರಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಿದೆ. ಉತ್ತರಕನ್ನಡ ಜಿಲ್ಲೆಯ ಜನಸಂಖ್ಯಾ ಬೆಳವಣಿಗೆ ದರ ಕಡಿಮೆಯಿದ್ದು, ಇದನ್ನು ಕಾಯ್ದುಕೊಳ್ಳಬೇಕಾಗಿದೆ. ದೇಶ ಇನ್ನೂ ಹಿಂದುಳಿಯಲು ಜನಸಂಖ್ಯೆ ಹೆಚ್ಚಳವೇ ಮುಖ್ಯಕಾರಣವಾಗಿದೆ. ನಿಯಂತ್ರಿತ ಜನಸಂಖ್ಯಾ ಬೆಳವಣಿಗೆಯಿಂದ ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬಹುದುಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ. ಎನ್. ಅಶೋಕಕುಮಾರ ಅವರು ಮಾತನಾಡಿ ಜನಸಂಖ್ಯಾ ನಿಯಂತ್ರಣದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಇಲಾಖೆ ವತಿಯಿಂದ ನಿರಂತರವಾಗಿ ಮಾಡಲಾಗುತ್ತಿದೆ. ಮಹಿಳೆಯರಿಗೆ ಹಾಗೂ ಪುರುಷರಿಗೆ ಸಂತಾನ ನಿಯಂತ್ರಣ ಚಿಕಿತ್ಸೆಗಳನ್ನು ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ನಡೆಸಲಾಗುತ್ತಿದೆ ಎಂದರು.

ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹೇಮಗಿರಿ ಕೆ ಅವರು ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿದ್ದರು. ರೆಡ್‍ಕ್ರಾಸ್ ಯುತ್ ವಿಂಗ್ ಕಾರ್ಯಾಧ್ಯಕ್ಷೆ ಡಾ. ಪ್ರೀತಿ ತಲ್ಲೂರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.