ತಂಬಾಕು ನಿಯಂತ್ರಣ ಕಾನೂನು- ಜಾಗೃತಿ ಕುರಿತು ಶಿಕ್ಷಕರಿಗೆ ಕಾರ್ಯಗಾರ


ಕುಮಟಾ: ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಪರಿಗಣಿಸಿ, ತಂಬಾಕು ಉತ್ಪನ್ನಗಳ ಉತ್ಪಾದನೆ, ಸರಬರಾಜು ಮತ್ತು ಮಾರಾಟದ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು 2003 ರಲ್ಲಿ ಜಾರಿಗೊಳಿಸಿದ ತಂಬಾಕು ನಿಯಂತ್ರಣ ಕಾನೂನು-ಕೋಟ್ಪಾ ಬಗ್ಗೆ ತಾಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವನ್ನು ಪಟ್ಟಣದ ನಾದಶ್ರೀ ಕಲಾಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರವನ್ನು ತಾ.ಪಂ ಕಾರ್ಯನಿರ್ವಹಣಾಧಿಕಾರಿ ಸಿ.ಟಿ.ನಾಯ್ಕ ಉದ್ಘಾಟಿಸಿದರು. ನಂತರ ಮಾತನಾಡಿ, ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ತಂಬಾಕು ನಿಷೇಧ ಪಾಲನೆಯಲ್ಲಿ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರ ಜವಾಬ್ದಾರಿಯ ಕುರಿತು ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕಾ ಆರೋಗ್ಯಾಧಿಕಾರಿ ಡಾ.ಆಜ್ಞಾ ನಾಯಕ ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಮಾಹಿತಿ ನೀಡಿದರು. ಡಿಎಸ್‍ಒ ಡಾ. ವಿನೋದ ಭೂತೆ ಹಾಗೂ ಜಿಲ್ಲಾ ಸಲಹೆಗಾರ ಪ್ರೇಮಕುಮಾರ ನಾಯ್ಕ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ಹಾನಿಕಾರದ ಕುರಿತು ವಿವರಿಸಿದರು.

ಮಹಾತ್ಮಾ ಗಾಂಧಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎನ್.ಆರ್.ಗಜು, ಶಿಕ್ಷಣ ಇಲಾಖೆಯ ಉಲ್ಲಾಸ ನಾಯ್ಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆರ್.ಜಿ.ನಾಯ್ಕ ಸ್ವಾಗತಿಸಿದರು. ಸಾಮಾಜಿಕ ಕಾರ್ಯಕರ್ತ ನದಾಫ್ ನಿರೂಪಿಸಿ, ವಂದಿಸಿದರು.

 

Categories: ಜಿಲ್ಲಾ ಸುದ್ದಿ

Leave A Reply

Your email address will not be published.