ಡಿ.6 ರಿಂದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

ಕುಮಟಾ: ಕೆನರಾ ಕಾಲೇಜು ಸೊಸೈಟಿಯ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಡಿ.6 ಮತ್ತು 7 ರಂದು 2 ದಿನಗಳ ಕಾಲ ಜಿಲ್ಲಾ ಮಟ್ಟದ ಅಂತರ್ ಪಾಲಿಟೆಕ್ನಿಕ್ ಕಾಲೇಜು ಸಿಬ್ಬಂದಿಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ರತನ ಗಾಂವಕರ ಹೇಳಿದರು.

ಬುಧವಾರ ಪಟ್ಟಣದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಸುದ್ದಿಗೊಷ್ಠಿ ನಡೆಸಿ, ಅವರು ಈ ಕುರಿತು ಮಾಹಿತಿ ನೀಡಿದರು. ಕೇಂದ್ರ ಸರ್ಕಾರದ ಫಿಟ್ ಇಂಡಿಯಾ ಅಭಿಯಾನದ ಅಡಿಯಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಫಿಟ್‍ನೆಸ್ ಕಾಪಾಡಿಕೊಂಡು, ವಿದ್ಯಾರ್ಥಿಗಳಿಗೆ ತಿಳಿಹೇಳುವ ಮೂಲ ಉದ್ದೇಶದಿಂದ ಈ ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಂಡಿದ್ದೇವೆ ಎಂದರು.

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಸಿದ್ದಾಪುರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಜೋಯಿಡಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಮುರ್ಡೇಶ್ವರದ ಆರ್.ಎನ್.ಎಸ್ ಪಾಲಿಟೆಕ್ನಿಕ್ ಕಾಲೇಜು, ಶಿರಸಿ ಎಂ.ಇ.ಎಸ್, ಆರ್.ಎನ್.ಎಸ್ ಪಾಲಿಟೆಕ್ನಿಕ್ ಕಾಲೇಜು, ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಸೇರಿದಂತೆ ಒಟ್ಟೂ 6 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ ಎಂದರು.

ಡಿ. 6 ರಂದು ಬೆಳಿಗ್ಗೆ 8 ಘಂಟೆಗೆ ಕಾಲೇಜಿನ ಮೈದಾನದಲ್ಲಿ ನಡೆಯುವ ಈ ಪಂದ್ಯಾವಳಿಗೆ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆನರಾ ಕಾಲೇಜು ಸೊಸೈಟಿಯ ಕಾರ್ಯಾಧ್ಯಕ್ಷ ಮುರಳಿಧರ ಪ್ರಭು ಪಾಲ್ಗೊಳ್ಳಲಿದ್ದು, ಕಾಲೇಜಿನ ಪ್ರಾಂಶುಪಾಲ ರತನ ಗಾಂವಕರ ಅಧ್ಯಕ್ಷತೆ ವಹಿಸಲಿದ್ದಾರೆ. ಡಿ. 7 ರಂದು ಸಂಜೆ 4 ಘಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಗಿರೀಶ ಕುಚಿನಾಡು, ಕೆನರಾ ಕಾಲೇಜು ಸೊಸೈಟಿಯ ಕಾರ್ಯದರ್ಶಿ ವಿನೋದ ಪ್ರಭು ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ರತನ ಗಾಂವಕರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಉಪನ್ಯಾಸಕ ಅಶೋಕ ಎನ್.ಎಸ್.ಮಾತನಾಡಿ, ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿಗಳಿಗೆ ಪ್ರಥಮವಾಗಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಇದೊಂದು ಆರೋಗ್ಯಕರ ಪಂದ್ಯಾವಳಿಯಾಗಿದೆ. ಎಲ್ಲರೂ ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ವಿನಂತಿಸಿಕೊಂಡರು.

ಕೆನರಾ ಕಾಲೇಜು ಸೊಸೈಟಿಯ ಕಾರ್ಯಾಧ್ಯಕ್ಷ ಮುರಳಿಧರ ಪ್ರಭು, ಉಪನ್ಯಾಸಕರಾದ ಪ್ರಕಾಶ ನಾಯ್ಕ, ಕುಮಾರ ನಾಯ್ಕ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.