ಬೆಂಗಳೂರು: ರಾಜ್ಯದಲ್ಲಿ ಜುಲೈ.26 ರಿಂದ ತೊಡಗಿದಂತೆ ಪದವಿ ಕಾಲೇಜುಗಳು ಭೌತಿಕವಾಗಿ ಆರಂಭವಾಗಲಿವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಈಗಾಗಲೇ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕೊರೋನಾ ಲಸಿಕಾ ಅಭಿಯಾನ ಆರಂಭಿಸಲಾಗಿತ್ತು. ಇದರಲ್ಲಿ 75% ಗಳಷ್ಟು ವಿದ್ಯಾರ್ಥಿಗಳು ಲಸಿಕೆ ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಲಸಿಕೆ ವಿತರಣಾ ಕಾರ್ಯಕ್ರಮ ಸಹ ವೇಗವಾಗಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಅಧ್ಯಯನ ನಡೆಸುತ್ತಿರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗುತ್ತಿದೆ. ಹಾಗೆಯೇ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೂ ಲಸಿಕೆ ನೀಡಲಾಗುತ್ತದೆ. ಭೌತಿಕ ತರಗತಿಗಳಿಗೆ ಹಾಜರಾಗುವವರು ಕಡ್ಡಾಯವಾಗಿ ಲಸಿಕೆ ಪಡೆದುಕೊಂಡಿರಬೇಕು ಎಂದು ಡಿಸಿಎಂ ಹೇಳಿದ್ದಾರೆ.