ಕಾರವಾರ: ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ 76ನೇ ಸ್ವಾತಂತ್ರ‍್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಭಾರತೀಯ ಸಂಸ್ಕೃತಿಯಂತೆ ಪಂಚೆ, ಶಲ್ಯ ಧರಿಸಿ ಆಗಮಿಸಿದ್ದ ಸಚಿವ ಪೂಜಾರಿ, ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದ ಬಳಿಕ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಾಗರೀಕ ಪೊಲೀಸ್ ತುಕಡಿ, ಮಹಿಳಾ ಪೊಲೀಸ್ ಪಡೆ, ಅರಣ್ಯ ಇಲಾಖೆ, ಚೆಂಡಿಯಾ ಘಟಕದ ಗೃಹ ರಕ್ಷಕ ದಳ, ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಕರ್ನಾಟಕ ನೇವಲ್ ಯುನಿಟ್ ಹಾಗೂ ಕರ್ನಾಟಕ ಬಟಾಲಿಯನ್ ತಂಡದವರಿಂದ ಪರೇಡ್ ನಡೆಯಿತು. ಸಚಿವರು ಪರೇಡ್ ಪರಿವೀಕ್ಷಣೆ ನಡೆಸಿ, ಪರೇಡ್ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಹಳಿಯಾಳ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಕ್ಷ್ಮಿದೇವಿ ಎಸ್. ಅವರಿಗೆ ಸರ್ವೋತ್ತಮ ಪ್ರಶಸ್ತಿ, ಜಿಲ್ಲೆಯಲ್ಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪಟಾಪ ವಿತರಿಸಲಾಯಿತು. 75ನೇ ಅಮೃತ ಮಹೋತ್ಸವದ ಅಂಗವಾಗಿ ಕಾರ್ಮಿಕ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಮದುವೆ ಸಹಾಯಧನ, ಹೆರಿಗೆ ಸಹಾಯಧನ ಹಾಗೂ ನ್ಯೂಟ್ರೀಶಿಯನ್ ಕಿಟ್ ಮತ್ತು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು. ನಂತರ ವಿವಿಧ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತೀಕ ಕಾರ್ಯಕ್ರಮಗಳು ಜರುಗಿದವು.
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕಿ ರೂಪಾಲಿ ನಾಯ್ಕ, ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರಸಭೆ ಅಧ್ಯಕ್ಷ ಡಾ.ನಿತಿನ್ ಎಸ್.ಪಿಕಳೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು.