ಕಾರವಾರ: ಮಹಿಳೆ ವಿದ್ಯಾವಂತಳಾಗಿ ಉದ್ಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲಳಾಗಿ ಸ್ವಾವಲಂಬಿಯಾಗಿ ಜೀವನ ನಡೆಸಬೇಕು. ಮಹಿಳೆಯರಿಗೆ ರಕ್ಷಣೆ ನೀಡುವುದೇ ಮಹಿಳಾ ಆಯೋಗದ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎನ್ಜಿಓ, ಸಿಡಿಪಿಓ ಇಲಾಖೆಯ ಕಚೇರಿಯಲ್ಲಿ ಸಭೆ, ಮಹಿಳಾ ಠಾಣೆ, ಒನ್ ಸ್ಟಾಫ್ ಸೆಂಟರ್, ಬಾಲಕಿಯರ/ಮಹಿಳೆಯರ ವಿದ್ಯಾರ್ಥಿನಿಲಯಗಳ ಭೇಟಿ, ಕೈಗಾದಲ್ಲಿ ಮಹಿಳಾ ಕಾರ್ಮಿಕ ಸದಸ್ಯರು ಹಾಗೂ ಬಂಧಿಖಾನೆಯ ಮಹಿಳೆಯರ ಜೊತೆಗೆ ಅವರ ಸಮಸ್ಯೆಗಳ ಕುರಿತು ಸಂವಾದ ನಡೆಸಲಾಗಿದೆ ಹಾಗೂ ಜಿಲ್ಲೆಯಲ್ಲಿ ಹಲವಾರು ಸ್ಥಳಗಳಿಗೆ ಭೇಟಿ ನೀಡಿ ಮಹಿಳೆಯರ ಸಮಸ್ಯೆಗಳ ಕುರಿತು ಮತ್ತು ರಕ್ಷಣೆಯ ಕುರಿತಾಗಿ ಪರಿಶೀಲನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮಹಿಳೆಯರ ರಕ್ಷಣೆಯ ವಿಚಾರದಲ್ಲಿ ಸಕಾರಾತ್ಮಕ ಅಂಶಗಳು ಕಂಡುಬಂದಿದ್ದು ಸಂತೋಷದ ವಿಚಾರವಾಗಿದೆ ಎಂದು ತಿಳಿಸಿದರು.
ರಾಜ್ಯದ 29 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 9 ಪ್ರಕರಣಗಳು ಕಂಡುಬಂದಿದ್ದು, ಅವುಗಳ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಹೆಣ್ಣುಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಪಾಲಿದೆ ಎಂಬ ಹಕ್ಕಿನನ್ವಯ ಮಹಿಳೆಯರಿಗೆ ಕಾನೂನಾತ್ಮಕವಾಗಿ ಆಸ್ತಿಯಲ್ಲಿ ಪಾಲು ನೀಡಬೇಕು. ಯಾರೂ ಸಹ ದೌರ್ಜನ್ಯದ ಮೂಲಕ ಆ ಹಕ್ಕಿನ ದಮನ ಮಾಡುವಂತಿಲ್ಲ, ಮಾಡಿದ್ದಲ್ಲಿ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ, ಕಾನೂನಿನಿಂದ ದಂಡನೆಗೆ ಒಳಗಾಗಬೇಕಾಗುತ್ತದೆ ಎಂದರು.
ಮಹಿಳೆಯರ ಸ್ವಾವಲಂಬಿ ಬದುಕು ನಿರ್ಮಾನಕ್ಕಾಗಿ ಮತ್ತು ರಕ್ಷಣೆಗಾಗಿ ಸರಕಾರ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದೆ. ಪೋಕ್ಸೋ ಕಾಯ್ದೆಯನ್ನು ತಂದು ಬಾಲಕಿಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಉತ್ತಮ ಕಾರ್ಯ ಮಾಡುತ್ತಿದೆ. ಮಹಿಳೆಯರೂ ಸಹ ತಮ್ಮ ಮೇಲಿನ ದೌರ್ಜನ್ಯವನ್ನು ಸಹಿಸಿಕೊಂಡು ಕೂಡದೇ ತಮಗಾಗುವ ಸಮಸ್ಯೆಯ ಕುರಿತು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಬೇಕು. ದೂರಿನನ್ವಯ ಸೂಕ್ತ ರಕ್ಷಣೆ ಹಾಗೂ ತಪ್ಪಿತಸ್ಥರಿಗೆ ದಂಡನೆ ವಿಧಿಸಲಾಗುವುದು ಎಂದ ಅವರು, ಯಾವುದೇ ಸಮಯದಲ್ಲೂ ತಮ್ಮ ಮೊಬೈಲ್ ಸಂಖ್ಯೆ: 9741149589 ಗೆ ಸಂಪರ್ಕಿಸಿ ದೂರು ನೀಡಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಮ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಶ್ಯಾಮಲಾ ಸಿ.ಕೆ. ಸೇರಿದಂತೆ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳು ಇದ್ದರು.