ದಾಂಡೇಲಿ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳಿಂದ ಜನತೆ ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ, ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡದೆ, ಜನರನ್ನು ಭಾವನಾತ್ಮಕ ವಿಚಾರಗಳ ಮೂಲಕ ಬೇರೆಡೆಗೆ ಸೆಳೆದು, ಜನವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಕಿಡಿಕಾರಿದರು.
ಅವರು ನಗರದ ಮರಾಠಾ ಭವನದಲ್ಲಿ ಹಳಿಯಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರ ಈವರೆಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಧರ್ಮ, ಧರ್ಮಗಳ ನಡುವೆ ಕೋಮುದ್ವೇಷದ ಕಿಡಿಯನ್ನು ಹಚ್ಚಿ ಸಮಾಜದ ಶಾಂತಿ ಕದಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಅಲ್ಲಲ್ಲಿ ಕೊಲೆಗಳು, ಮತೀಯ ಗಲಭೆಗಳು ಸೃಷ್ಟಿಯಾಗಿ ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದರು.
ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷವು, ಅಂದು ಕಾಂಗ್ರೆಸ್ ರೂಪಿಸಿದ್ದ ಲಾಭದಾಯಕ ಸರಕಾರಿ ಸ್ವಾಮ್ಯದ ಕಂಪೆನಿಗಳನ್ನು ತಮಗೆ ಇಷ್ಟ ಬಂದಂತೆ ಮಾರಾಟ ಮಾಡಿ ದೇಶವನ್ನು ಅಧೋಗತಿಗೆ ತಳ್ಳುತ್ತಿದೆ ಎಂದ ಅವರು, ಬಿಜೆಪಿ ಪಕ್ಷದ ಕಾರ್ಯಕರ್ತನೆ ರಾಜ್ಯದ ಬಿಜೆಪಿ ಸರಕಾರವನ್ನು 40% ಕಮಿಶನ್ ಸರಕಾರ ಎಂದು ಉಲ್ಲೇಖಿಸಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯನ್ನು ಕೇಳಿದ್ದೇವೆ. ಭ್ರಷ್ಟಾಚಾರ ವ್ಯಾಪಕವಾಗಿದ್ದು, ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಭ್ರಷ್ಟಾಚಾರವನ್ನೆ ಮೂಲ ಬಂಡವಾಳವನ್ನಾಗಿಸಿಕೊಂಡ ಬಿಜೆಪಿ ಸರಕಾರವನ್ನು ಕಿತ್ತೊಗೆದು ರಾಜ್ಯ ಮತ್ತು ಕೇಂದ್ರದಲ್ಲಿ ಮತ್ತೆ ಜನಪರ, ಅಭಿವೃದ್ಧಿಪರ ಸರಕಾರ ಬರಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದರು.
ಕೆಪಿಸಿಸಿ ಜಿಲ್ಲಾ ಉಸ್ತುವಾರಿಗಳಾದ ಪ್ರಕಾಶ ಪಾಟೀಲ, ನವೀನಚಂದ್ರ, ಪಕ್ಷದ ತಾಲೂಕು ಉಸ್ತುವಾರಿ ಚಂದ್ರಪ್ಪ ಬೇಡರ, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಸುಜಾತಾ ಗಾಂವಕರ ಭಾಗವಹಿಸಿದ್ದರು. ವೇದಿಕೆಯಲ್ಲಿ ನಗರಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್, ಹಳಿಯಾಳ ಪುರಸಭೆಯ ಅಧ್ಯಕ್ಷ ಅಜರುದ್ದೀನ್ ಬಸರಿಕಟ್ಟಿ, ಪಕ್ಷದ ಪಕ್ಷದ ಜಿಲ್ಲಾ ವಕ್ತಾರ ಆರ್.ಪಿ.ನಾಯ್ಕ, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯ್ಕ, ಪರಿಶಿಷ್ಟ ಜಾತಿ ವೀಭಸಗದ ಜಿಲ್ಲಾಧ್ಯಕ್ಷ ಬಸವರಾಜ ದೊಡ್ಡಮನಿ, ಅಸಂಘಟಿತ ಕಾರ್ಮಿಕರ ವಿಭಾಗದ ಜಿಲ್ಲಾಧ್ಯಕ್ಷ ರಾಜೇಸಾಬ ಕೇಸನೂರು, ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಅಬ್ದುಲ್ ಮಜೀದ್ ಶೇಖ್, ಪರಿಶಿಷ್ಟ ಪಂಗಡದ ಜಿಲ್ಲಾಧ್ಯಕ್ಷ ಅನಿಲ್ ನಾಯ್ಕರ್ ಇದ್ದರು.
ಕೋಟ್…
ಕೇಂದ್ರ ಮತ್ತು ರಾಜ್ಯ ಸರಕಾರದ ಆಡಳಿತ ವೈಫಲ್ಯಗಳನ್ನು ಮನೆ ಮನೆಗಳಿಗೆ ತಲುಪಿಸುವ ಕೆಲಸವನ್ನು ಪಕ್ಷದ ಮುಖಂಡರಾದಿಯಾಗಿ ಕಾರ್ಯಕರ್ತರು ಮಾಡಬೇಕು. ಈ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲೆ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ, ಮುಂಬರಲಿರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲು ಪಕ್ಷದ ಮುಖಂಡರು, ಕಾರ್ಯಕರ್ತರು ಸಮರಸೇನಾನಿಗಳಾಗಿ ಕಾರ್ಯನಿರ್ವಹಿಸಬೇಕು.
· ಭೀಮಣ್ಣ ನಾಯ್ಕ, ಡಿಸಿಸಿ ಅಧ್ಯಕ್ಷ