ಸಿದ್ದಾಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ, ಶಿರಸಿಯ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಸಹಯೋಗದೊಂದಿಗೆ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ನವಜೀವನ ಸದಸ್ಯರ ಅಭಿನಂದನಾ ಕಾರ್ಯಕ್ರಮ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ನಡೆಯಿತು.
ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ವಿ.ರಾವ್ ಉದ್ಘಾಟಿಸಿ, ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುವ ಮದ್ಯವರ್ಜನ ಶಿಬಿರದ ಮೂಲಕ ಪಾನಮುಕ್ತರಾಗಿ ನವಜೀವನ ಸದಸ್ಯರಾಗಿ ಉತ್ತಮ ಬಾಳ್ವೆ ನಡೆಸುತ್ತಿರುವ ತಮ್ಮೆಲ್ಲರಿಗೂ ಅಭಿನಂದನೆಗಳು ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಸುಭಾಸ್ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನವಜೀವನ ಸದಸ್ಯರಿಗೆ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾಕ್ಟರ್ ರೂಪ ಭಟ್, ಪ್ರೊ.ರಾಮು ಕಿಣಿ ಶಿರಸಿ ಉಪನ್ಯಾಸ ನೀಡಿದರು.
ತಾಲೂಕು ಯೋಜನಾಧಿಕಾರಿ ಪ್ರಭಾಕರ ನಾಯ್ಕ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ಮಹಾದೇವ ಬಿ. ಕಾರ್ಯಕ್ರಮ ನಿರೂಪಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರಭಾವತಿ ವಂದಿಸಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಸದಸ್ಯರಾದ ರಮೇಶ್ ಹಾರ್ಸಿಮನೆ, ಉಪೇಂದ್ರ ಪೈ, ಪಿಎಸ್ಐ ಎಮ್.ಜಿ.ಕಂಬಾರ ಉಪಸ್ಥಿತರಿದ್ದರು.