ಕಾರವಾರ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ಮರು ವಿಂಗಡಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ಇತರೆ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಮತ್ತೆ 12 ವಾರಗಳ ಕಾಲ ಹೈಕೋರ್ಟ್ ಕಾಲಾವಕಾಶ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ಅನಿರುದ್ಧ್ ಬೋಸ್ ಅವರ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ರಾಜ್ಯ ಚುನಾವಣಾ ಆಯೋಗದ ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್ ನೀಡಿದ ಆದೇಶಕ್ಕೆ ತಡೆ ನೀಡಿ ಈ ಹಿಂದೆ ಆಯೋಗ ಹೊರಡಿಸಿದ ಆದೇಶದ ಪ್ರಕಾರ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಬೇಕೆಂದು ರಾಜ್ಯ ಚುನಾವಣಾ ಆಯೋಗದಿಂದ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದರು. ನಂತರ ಸುಪ್ರೀಂ ಕೋರ್ಟ್ ಪೀಠ ಚುನಾವಣಾ ಆಯೋಗದ ಅರ್ಜಿಯನ್ನು ವಜಾಗೊಳಿಸಿದೆ.