ಕಾರವಾರ: ಜಿಲ್ಲೆಯಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಜರುಗಿದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 11,61,687 ಮತದಾರರಿದ್ದಾರೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯಲ್ಲಿ ಹೊಸ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ, ಹೆಸರು ಕಡಿಮೆಗೊಳಿಸಲು ನಮೂನೆ-7ರಲ್ಲಿ ಮತ್ತು ಹೆಸರು ಇತ್ಯಾದಿ ತಿದ್ದುಪಡಿ ಬಯಸಿದ್ದಲ್ಲಿ ನಮೂನೆ-8ರಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಂಬAಧಪಟ್ಟ ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್ಓ) ಸಲ್ಲಿಸಬೇಕು ಎಂದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳಾಪಟ್ಟಿಯಂತೆ ಡಿಸೆಂಬರ್ 8ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ಕಲ್ಪಿಸಿಕೊಡಲಾಗಿದೆ. ಬಿಎಲ್ಓಗಳು ಪ್ರತಿ ಮನೆ ಮನೆ ಹೋಗಿ ಮತದಾರರ ಮಾಹಿತಿ ಕಲೆಹಾಕುವ ಕಾರ್ಯ ನಡೆಯುತ್ತಿರುತ್ತದೆ. ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಆಂದೋಲನ ಡಿಸೆಂಬರ್ 3 ಮತ್ತು 4ರಂದು ನಡೆಯಲಿದೆ ಹಾಗೂ ಅಂತಿಮ ಮತದಾರರ ಪಟ್ಟಿಯ ಅಧಿಸೂಚನೆ 2023ರ ಜ.5ರಂದು ಪ್ರಕಟವಾಗುತ್ತದೆ ಎಂದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಚುನಾವಣೆ ಶಾಖೆ ಶಿರಸ್ತೆದಾರ ಎಂ.ಶೇಖ್, ಬಿಜೆಪಿಯ ದಾಮೋದರ ರಾಯ್ಕರ, ಕಾಂಗ್ರೆಸ್ನ ವಿನೋದ ಬಿ.ನಾಯಕ, ಪ್ರಭಾಕರ ಮಾಳ್ಸೇಕರ್ ಹಾಗೂ ಜೆಡಿಎಸ್ ಪಕ್ಷದಿಂದ ಅಜಿತ ಆರ್.ಪೊಕಳೆ ಪಾಲ್ಗೊಂಡಿದ್ದರು.