ದಾಂಡೇಲಿ: ಪೌರ ಕಾರ್ಮಿಕರಿಗೆ ಸಂಕಷ್ಟ ಭತ್ಯೆ ನೀಡುವಂತೆ ಹಾಗೂ ಪೌರಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಪರಿಹರಿಸುವಂತೆ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿಯು ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ರವಾನಿಸಿತು.
ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಪೌರಕಾರ್ಮಿಕರು ಮತ್ತು ಇನ್ನಿತರೇ ಕಾರ್ಮಿಕರಿಗೆ ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವೇತನ ಹಾಗೂ ಇನ್ನಿತರ ವಿಷಯಗಳಲ್ಲಿ ತೊಂದರೆಗಳು ಉಂಟಾಗುತ್ತಿವೆ. ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳವರ ನೇತೃತ್ವದಲ್ಲಿ ಸಭೆ ನಡೆಸುವಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದ್ದರೂ ಒಂದೇ ಒಂದು ಸಭೆಯನ್ನು ನಡೆಸಿರುವುದಿಲ್ಲ. ಇದೀಗ ತಮ್ಮ ಅವಧಿಯಲ್ಲಾದರೂ ಕಾಲಕಾಲಕ್ಕೆ ಸಭೆ ನಡೆಸಿ, ಪೌರಕಾರ್ಮಿಕರ ಕುಂದು ಕೊರತೆಗಳನ್ನು ಪರಿಹರಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಪೌರಕಾರ್ಮಿಕರ ವೇತನ ಸೇರಿದಂತೆ ಇನ್ನೂ ಅನೇಕ ಸಮಸ್ಯೆಗಳಿದ್ದು, ಪೌರಕಾರ್ಮಿಕರು ನೆಮ್ಮದಿಯಿಂದ ಕೆಲಸ ಮಾಡಲು ಕಷ್ಟಸಾಧ್ಯವಾಗಿದೆ. ಇವೆಲ್ಲವುಗಳನ್ನು ಗಮನದಲ್ಲಿಟ್ಟುಕೊಂಡು ಪೌರ ಕಾರ್ಮಿಕರ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಿಕೊಡುವಂತೆ ಹಾಗೂ ಪೌರ ಕಾರ್ಮಿಕರಿಗಿರುವ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಿಕೊಡಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.
ಈ ಸಂದರ್ಭದಲ್ಲಿ ಮುನ್ಸಿಪಲ್ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿಯ ಅಧ್ಯಕ್ಷ ಡಿ.ಸ್ಯಾಮಸನ್, ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾಂಜನೇಯ, ಸಂಘದ ಪ್ರಮುಖರುಗಳಾದ ಬಾಬುರಾವ್ ಗಜ್ಜಾ, ಯಾಕುಬು ಜಾಕೋಬ್ ದರ್ಶಿ, ರೋಸಯ್ಯ, ರಫೀಕ್, ಚಿನ್ನರಾಮಾಂಜನೇಯ, ದೇವಯ್ಯ ಮೊದಲಾದವರು ಉಪಸ್ಥಿತರಿದ್ದರು.