ಕುಮಟಾ: ಪಟ್ಟಣದ ಸಿದ್ದನಬಾವಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪಕ್ಕದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 1.95 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಶಾಸಕ ದಿನಕರ ಶೆಟ್ಟಿ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದ್ದು, ಪಾಲಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವತ್ತ ಹೆಚ್ಚಿನ ಒತ್ತು ನೀಡಬೇಕು. ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿ ನಡೆದಿದೆ ಎಂದ ಅವರು, ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ ಪ್ರತಿಯೊಬ್ಬ ವ್ಯಕ್ತಿಗೆ ತಲುಪಿಸುವಲ್ಲಿ ಕ್ಷೇತ್ರದ ಶಾಸಕನಾಗಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇನೆ. ಅಭಿವೃದ್ಧಿ ಎನ್ನುವುದು ನಿಂತ ನೀರಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳು ಪ್ರತಿ ಮನೆಯಲ್ಲಿ ಕಾಣಸಿಗುತ್ತಾರೆ. ಸರ್ಕಾರ ಅನುಷ್ಠಾನಗೊಳಿಸಿದ ಯೋಜನೆಗಳನ್ನು ಪ್ರತಿಯೊಬ್ಬರಿಗೆ ತಲುಪಿಸುವಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದಾರೆ ಎಂದರು.
ಪುರಸಭಾ ಅಧ್ಯಕ್ಷೆ ಅನುರಾಧಾ ಬಾಳೇರಿ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ ಅಂಬಿಗ, ಸದಸ್ಯರಾದ ಪಲ್ಲವಿ ಮಡಿವಾಳ, ತುಳುಸು ಗೌಡ, ಸಂತೋಷ ನಾಯ್ಕ, ಗೀತಾ ಮುಕ್ರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾಧಿಕಾರಿ ಗಣೇಶ ಪಟಗಾರ, ಪಂಚಾಯತರಾಜ್ ಇಲಾಖೆಯ ಎಂಜಿನಿಯರ್ ಸಂಜು ನಾಯಕ, ಸಹಾಯ ಅಭಿಯಂತರ ಗಜಾನನ ಸೇರಿದಂತೆ ಮತ್ತಿತರರು ಇದ್ದರು.