ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ವಾಪಸ್ ಪಡೆಯಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಕ್ಷರಿ, ರಾಜ್ಯ ಸರ್ಕಾರ ಎರಡು ಆದೇಶವನ್ನು ಹೊರಡಿಸಿದ್ದು ಶೇ.17 ರಷ್ಟು ವೇತನ ಹೆಚ್ಚಳ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆ -ಎನ್ ಪಿಎಸ್ ಬಗ್ಗೆ ಪರಿಶೀಲನೆ ಆದೇಶ ಮಾಡಿದೆ. ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಮಧ್ಯಂತರ ಆದೇಶ ಹೊರಡಿಸಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಆದೇಶವನ್ನು ಸರ್ಕಾರಿ ನೌಕರರು ಒಪ್ಪಿದ್ದೇವೆ. ಹಾಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ ನೌಕರರ ಮುಷ್ಕರ ವಾಪಸ್ ಪಡೆಯುವುದಾಗಿ ತಿಳಿಸಿದರು. ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದರು. ದೂರದೂರುಗಳಲ್ಲಿರುವವರು ನಾಳೆ ಕೆಲಸಕ್ಕೆ ಹಾಜರಾಗುತ್ತಾರೆ. ಒಟ್ಟಿನಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾಗುತ್ತಾರೆ ಎಂದರು.