ಶಿರಸಿ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಜೊತೆಗಿನ ಸಮಾಲೋಚನೆ ಬಳಿಕ ಆರ್.ವಿ.ದೇಶಪಾಂಡೆ ಸೂಚನೆಯ ಮೇರೆಗೆ ಪಕ್ಷದ ಆದೇಶ ಪಾಲಿಸಲು ಶಿರಸಿ-ಸಿದ್ದಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದೇನೆ ಎಂದು ವೆಂಕಟೇಶ ಹೆಗಡೆ ಹೊಸಬಾಳೆ ಹೇಳಿದ್ದಾರೆ.
ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟೇಶ ಹೆಗಡೆ ಹೊಸಬಾಳೆ ಬಂಡಾಯ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿ ನಾಮಪತ್ರ ಸಲ್ಲಿಸಿದ್ದರು. ಆದರೆ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಜೊತೆ ನಡೆದ ಆಪ್ತ ಸಮಾಲೋಚನೆಯ ನಂತರ ವೆಂಕಟೇಶ ಹೆಗಡೆ ನಾಮಪತ್ರ ಹಿಂಪಡೆಯುವ ನಿರ್ಧಾರ ಕೈಗೊಂಡಿದ್ದಾರೆ.
ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಭೀಮಣ್ಣ ನಾಯ್ಕ್ ಅವರಿಗೆ ನನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿ, ಅವರ ಗೆಲುವಿಗಾಗಿ ಅವಿಶ್ರಾಂತವಾಗಿ ಶ್ರಮಿಸುವುದಾಗಿ ಹೇಳಿದ್ದಾರೆ.
ನಾವೆಲ್ಲರೂ ಭೀಮಣ್ಣ ನಾಯ್ಕ ಅವರನ್ನು ಗೆಲ್ಲಿಸುವ ಮೂಲಕ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸೋಣ ಎಂದು ತಮ್ಮ ಬೆಂಬಲಿಗರಿಗೆ, ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.