ಕಾರವಾರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ನಿಮಿತ್ತ ಮೇ 10ರಂದು ಮತದಾನ ಜರುಗಲಿದ್ದು, ಜಿಲ್ಲೆಯ ಒಟ್ಟು 1435 ಮತಗಟ್ಟೆ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಹಾಗೂ ಜಿಲ್ಲೆಯಾದ್ಯಂತ ಚುನಾವಣಾ ಪ್ರಕ್ರಿಯೆಗಳಿಗೆ ಅನ್ವಯಿಸುವಂತೆ ಮಾತ್ರ ಮೇ 8ರಂದು ರಾತ್ರಿ 10 ಗಂಟೆಯಿ0ದ ಮೇ 11ರ ಬೆಳಿಗ್ಗೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ. 1973ರ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನದ ಉದ್ದೇಶದ ಹೊರತಾಗಿ ಹೆಚ್ಚು ಜನರು ಗುಂಪು ಸೇರುವುದು ನಿಷೇಧಿಸಿದೆ, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ, ಚುನಾವಣಾ ಅಭ್ಯರ್ಥಿ /ಬೆಂಬಲಿಗರು ಸೇರಿ ಸಭೆ ನಡೆಸುವಂತಿಲ್ಲ, ಶಸ್ತ್ರ, ಬಡಿಗೆ, ಬರ್ಚಿ , ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ , ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟ ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನ ಪ್ರತಿಬಂಧಿಸಲಾಗಿದೆ.
ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ಮತದಾರರಿಗೆ ಆಮಿಷ ಒಡ್ಡಿ ಅಭ್ಯರ್ಥಿಯ ಪರ ಮತಯಾಚಿಸುವುದನ್ನು ನಿರ್ಬಂಧಿಸಲಾಗಿದೆ. ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತ ಉಲ್ಲಂಘನೆಯಾಗದ0ತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು/ ನಿಯಮಗಳನ್ನು ಪಾಲಿಸುವುದು, ಮತದಾನದ ದಿನದಂದು ಮತಗಟ್ಟೆಗಳ ಒಳಗೆ ಮೊಬೈಲ್ ಫೋನ್, ಇನ್ನಿತರ ಎಲೆಕ್ಟ್ರಾನಿಕ್ಸ್, ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ (ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳು/ ಸಿಬ್ಬಂಧಿ ಹೊರತುಪಡಿಸಿ).
ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬAಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ, ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಕೂಡ ಬಳಸುವಂತಿಲ್ಲ. ಸದರಿ ಅದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.