ಅಂಕೋಲಾ: ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳ ಪ್ರತಿಭಟನೆ ಬೆಂಬಲಿಸಿ ಹಾಗೂ ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹಿಸಿದೆ.
ಈ ಕುರಿತು ತಹಶೀಲ್ದಾರರ ಮೂಲಕ ಪ್ರಧಾನಿಗೆ ಪತ್ರ ರವಾನಿಸಿರುವ ಅವರು, ಒಲಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್ ಕುಸ್ತಿ ಪಟುಗಳು ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿ ಕ್ರೀಡಾಪಟುಗಳು 2023 ಏಪ್ರಿಲ್ 24ರಿಂದ ನವದೆಹಲಿಯ ಜಂತರ್ ಮಂಥರ್ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವುದನ್ನು ಬೆಂಬಲಿಸಿ ಈ ಕೂಡಲೇ ಪೋಸ್ಕೋ ಸೇರಿದಂತೆ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಿಂಸೆ ನಡೆಸಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಬಂಧಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದೆ.
ಪೊಲೀಸ್ ದೂರು ನೀಡಿದ್ದರೂ ಎಫ್ಐಆರ್ ದಾಖಲಾಗಿರಲಿಲ್ಲ. ಸುಪ್ರೀಂ ಕೋರ್ಟ್ನ ಮಧ್ಯಪ್ರವೇಶದ ನಂತರವಷ್ಟೇ ಎಫ್ಐಆರ್ ದಾಖಲಾಗಿದೆ. ಈ ಪ್ರತಿಭಟನಾ ಕುಸ್ತಿಪಟುಗಳು ತಮ್ಮ ಮೇಲಾಗಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಮಾತ್ರ ಕೇಳುತ್ತಿದ್ದಾರೆ ಹಾಗೂ ಕುಸ್ತಿ ಪಟುಗಳ ಆರೋಪದ ಹಿನ್ನೆಲೆಯಲ್ಲಿ ರಚಿಸಲಾದ ವಿಚಾರಣಾ ಸಮಿತಿಯ ವರದಿಯನ್ನು ಸಾರ್ವಜನಿಕರ ಅವಗಾಹನೆ ತರಬೇಕು ಎಂದು ಆಗ್ರಹಿಸಿದ್ದಾರೆ.
ಭಾರತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಇನ್ನಿತರ ಸಿಬ್ಬಂದಿಗಳು, ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿದಂತೆ ಪ್ರಖ್ಯಾತ ಮಹಿಳಾ ಕುಸ್ತಿ ಪಟುಗಳನ್ನು ಲೈಂಗಿಕ ಕಿರುಕುಳ ಹಾಗೂ ಹಿಂಸೆಗೆ ಒಳಪಡಿಸಿರುವುದು ಅತ್ಯಂತ ಅಘಾತಕಾರಿ ಮತ್ತು ದೇಶವೇ ತಲೆತಗ್ಗಿಸುವಂತಹ ಘಟನೆಯಾಗಿದೆ ಎಂದು ತಿಳಿಸಿದ್ದಾರೆ. ಲೈಂಗಿಕ ಕಿರುಕುಳ ಹಾಗೂ ಹಿಂಸೆ ಕೊನೆಗಾಣಬೇಕು ಇದಕ್ಕಾಗಿ ದೇಶದ ಎಲ್ಲಾ ನಾಗರಿಕರು ಈ ಪ್ರತಿಭಟನೆಯನ್ನು ಬೆಂಬಲಿಸಬೇಕು. ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರ ಮೇಲೆ ಇಷ್ಟು ಕಿರುಕುಳ ಆದರೆ ಇನ್ನು ಸಾಮಾನ್ಯ ಮಹಿಳೆಯರ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆ ಕೇಳುವುದು ಹೇಗೆ ಎಂಬ ಪ್ರಶ್ನೆಯನ್ನು ನಾವೆಲ್ಲರೂ ಹಾಕಿಕೊಳ್ಳಬೇಕಾಗುತ್ತದೆ. ದೇಶಕ್ಕೆ ಕೀರ್ತಿ ತರುವ ಸಾಮಾರ್ಥ್ಯದ ಕ್ರೀಡಾಪಟುಗಳ ಆತ್ಮಸ್ಥೈರ್ಯ ಕುಂದಿಸುವ ಕೆಲಸವನ್ನು ಈ ಕೂಡಲೇ ಬಿಜೆಪಿ ಸರ್ಕಾರ ನಿಲ್ಲಿಸಬೇಕೆಂದು ಆಗ್ರಹಿಸಿದೆ.
ಮನವಿ ಸಲ್ಲಿಸುವ ವೇಳೆ ಕೆಪಿಆರ್ಎಸ್ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ, ತಾಲೂಕು ಅಧ್ಯಕ್ಷ ಗೌರೀಶ ನಾಯಕ, ಕಾರ್ಯದರ್ಶಿ ಸಂತೋಷ ನಾಯ್ಕ, ಜಂಟಿ ಕಾರ್ಯದರ್ಶಿ ಉದಯ ನಾಯ್ಕ ಇದ್ದರು.