ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ದೇಶದ ಅಗ್ರ ಕುಸ್ತಿಪಟುಗಳು ಶನಿವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ.
ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.
ವರದಿಗಳ ಪ್ರಕಾರ, ಧರಣಿ ನಿರತ ಕುಸ್ತಿಪಟುಗಳು ಮತ್ತು ಗೃಹ ಸಚಿವರ ನಡುವೆ ಶನಿವಾರ ರಾತ್ರಿ ಸಭೆ ನಡೆಯಿತು. ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆ ಮಧ್ಯರಾತ್ರಿಯವರೆಗೂ ಮುಂದುವರೆದಿದೆ, ಈ ಸಂದರ್ಭದಲ್ಲಿ ಬ್ರಿಜ್ ಭೂಷಣ್ ವಿರುದ್ಧ ಶೀಘ್ರ ಆರೋಪಪಟ್ಟಿಗಾಗಿ ಕುಸ್ತಿಪಟುಗಳು ಒತ್ತಾಯಿಸಿದ್ದಾರೆ ಎನ್ನಲಾಗಿದೆ
ಕುಸ್ತಿಪಟುಗಳ ಮಾತುಗಳನ್ನು ಆಲಿಸಿದ ಅಮಿತ್ ಶಾ, ಅವರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವುದಾಗಿ ಭರವಸೆ ನೀಡಿದರು. ಈ ಹಿಂದೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದರು ಮತ್ತು ಸಚಿವರು ಆರೋಪಗಳ ಬಗ್ಗೆ ನ್ಯಾಯಯುತ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದರು.
ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9 ರೊಳಗೆ ಬಂಧಿಸಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕೈತ್ ಶುಕ್ರವಾರ ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಬಳಿಕ ಕುಸ್ತಿಪಟುಗಳು ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.