ಬೆಂಗಳೂರು: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಬಗ್ಗೆ ಮಾನಹಾನಿಕರ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಪ್ರಮುಖ ಇಂಗ್ಲೀಷ್ ಮತ್ತು ಕನ್ನಡ ದಿನ ಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ನ್ಯಾಯಾಲಯದ ಮೆಟ್ಟಿಲೇರಿತ್ತು.
ಮಾನಹಾನಿ ಮಾಡಲಾಗಿದೆ ಎಂದು ಆಕ್ಷೇಪಿಸಿ ಬಿಜೆಪಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ವಿಶೇಷ (ಮ್ಯಾಜಿಸ್ಟ್ರೇಟ್) ನ್ಯಾಯಾಲಯದ ನ್ಯಾಯಾಧೀಶೆ ಜೆ ಪ್ರೀತ್ ಅವರು ಐಪಿಸಿಯ ಸೆಕ್ಷನ್‌ಗಳಾದ 499 ಮತ್ತು 500ರ ಅಡಿ ಕಾಂಗ್ರೆಸ್, ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಸಮನ್ಸ್ ಜಾರಿಗೊಳಿಸಿದ್ದಾರೆ.
ದೂರುದಾರ ಬಿಜೆಪಿಯ ಹೇಳಿಕೆ ದಾಖಲಿಸಿಕೊಳ್ಳಲು ಪ್ರಕರಣವನ್ನು ಜುಲೈ 27ಕ್ಕೆ ಮುಂದೂಡಲಾಗಿದೆ ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.
ದೂರುದಾರರ ವಾದ ಮತ್ತು ಅವರು ದೂರಿನಲ್ಲಿ ವಿವರಿಸಿರುವುದನ್ನು ಹಾಗೂ ಸಲ್ಲಿಸಲಾಗಿರುವ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ದೂರನ್ನು ಪುರಸ್ಕರಿಸಲು ನ್ಯಾಯಾಲಯವು ಮುಂದಾಗಿದೆ. ಅಲ್ಲದೆ, ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆಯೂ ಸೂಚನೆ ನೀಡಿದೆ.
ಕೃಪೆ:http://News13.in