ಕಾರವಾರ: ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್ ಅವರಿಗೆ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಹಾಯಕ ಸಾಂಖ್ಯಿಕ ಅಧಿಕಾರಿ, ತಾಲೂಕಾ ಯೋಜನಾಧಿಕಾರಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ಅಣ್ವೇಕರ್ ಅವರಿಗೆ ದೊಡ್ಡಬಳ್ಳಾಪುರದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಇವರ ಪ್ರಾಮಾಣಿಕತೆ, ಕಾರ್ಯದಕ್ಷತೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಇತ್ತೀಚಿಗೆ ದೊಡ್ಡಬಳ್ಳಾಪುರದ ಕೆ.ಎಂ.ಎಚ್ ಕಲ್ಯಾಣ ಮಂಟಪದಲ್ಲಿ ನಡೆದ ರಾಜ್ಯಮಟ್ಟದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅಣ್ವೇಕರ್ ಅವರು ಕೇವಲ ಕರ್ತವ್ಯವನ್ನು ಪ್ರಾಮಾಣಿಕವಾಗಿ ಮಾಡುವುದಲ್ಲದೆ, ಇತರ ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗಿ ತಮ್ಮ ಸೇವೆಯನ್ನು ಸಮಾಜಕ್ಕೆ ಮುಡಿಪಾಗಿಟ್ಟಿದ್ದಾರೆ. ಸೂರಿಲ್ಲದವರಿಗೆ ಸೂರು ಕಟ್ಟಿಸಿಕೊಡುವುದು, ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವುದು, ದೇವಸ್ಥಾನಗಳ ಜೀರ್ಣೋದ್ಧಾರದಂತ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಇದಲ್ಲದೆ, ತಾಲೂಕು ಮತ್ತು ಗ್ರಾಮ ಪಂಚಾಯತ್ ಕಾಮಗಾರಿಗಳು, ವಸತಿ ಯೋಜನೆಯಡಿಯ ಜಿಲ್ಲಾ ನೋಡಲ್ ಅಧಿಕಾರಿಯಾಗಿ ಪ್ರಮುಖ ಕಾರ್ಯಕ್ರಮಗಳಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ.