ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ ನೀಡಿದ್ದಾರೆ.
ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್, ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆ ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ.
ಈ ಮಸೂದೆಗಳಲ್ಲಿ ಎರಡು ಮಸೂದೆಗಳಿಗೆ ವಿರೋಧ ಪಕ್ಷಗಳಿಂದ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು. ಇದೀಗ ಅವು ಕಾನೂನಾಗಿ ಮಾರ್ಪಾಡಾಗಿದೆ.
ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರದಿಂದ ದೆಹಲಿಯ ಅಧಿಕಾರಶಾಹಿಯ ಮೇಲಿನ ನಿಯಂತ್ರಣವನ್ನು ಕಸಿದುಕೊಳ್ಳುವ ಸುಗ್ರೀವಾಜ್ಞೆಯನ್ನು ಬದಲಿಸುವ ರಾಷ್ಟ್ರ ರಾಜಧಾನಿಯಲ್ಲಿನ ಸೇವೆಗಳ ನಿಯಂತ್ರಣದ ಮೇಲಿನ ಕೇಂದ್ರದ ಮಸೂದೆಗೆ ಪ್ರತಿಪಕ್ಷಗಳ ಮೈತ್ರಿಕೂಟ INDIA ಬಣದಿಂದ ಬಲವಾದ ವಿರೋಧ ವ್ಯಕ್ತವಾಗಿತ್ತು. ಸಂಸತ್ತಿನ ಮತದಾನದ ವೇಳೆ ವಿರೋಧ ಪಕ್ಷದ ಮೈತ್ರಿಕೂಟದ ಸಂಸದರು ಸಭಾತ್ಯಾಗ ಮಾಡಿದ್ದರು.
ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಶಾಹಿಗಳನ್ನು ಯಾರು ನಿಯಂತ್ರಿಸುತ್ತಾರೆ ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಅತಿಕ್ರಮಿಸುವ ಸರ್ಕಾರದ ಉದ್ದೇಶಿತ ಕಾನೂನನ್ನು ಗೃಹ ಸಚಿವ ಅಮಿತ್ ಶಾ ಸಮರ್ಥಿಸಿಕೊಂಡಿದ್ದರು.