ಸಿದ್ದಾಪುರ: ಸರ್ಕಾರದ ಕಾರ್ಯಕ್ರಮ ಹಾಗೂ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕೆಂದರೆ ಸರ್ಕಾರಿ ನೌಕರರ ಪಾತ್ರ ಮುಖ್ಯವಾಗಿದ್ದು, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಿದ್ದಾಪುರ ಶಾಖೆ ವತಿಯಿಂದ ಪಟ್ಟಣದ ರಾಘವೇಂದ್ರ ಮಠದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಕಾರ್ಯಕ್ರಮ ಸರಿಯಾಗಿ ಅನುಷ್ಠಾನಕ್ಕೆ ಬರಲು ನೌಕರರ ಪಾತ್ರ ದೊಡ್ಡದಿದೆ. ನಿಮ್ಮ ಅವಧಿಯಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಎಂದರು.
ಏಳನೇ ವೇತನ ಆಯೋಗದ ಅನುಷ್ಠಾನ ಹಾಗೂ ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರದ ಗಮನಕ್ಕೆ ತರಲಾಗುವುದು. ಸರ್ಕಾರದ ಕೆಲಸವನ್ನು ಶ್ರದ್ಧೆ ಹಾಗೂ ಭಕ್ತಿಯಿಂದ ಮಾಡುವ ಮೂಲಕ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದ ಅವರು, ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಸಮಸ್ತ ನೌಕರರು ಸಹಕಾರ ನೀಡುವಂತೆ ಸೂಚಿಸಿದರು.
ಸಂಘದ ಅಧ್ಯಕ್ಷ ರಾಜೇಶ ನಾಯ್ಕ ಪ್ರಾಸ್ತಾವಿಕ ಮಾತನಾಡಿ, ಸರ್ಕಾರಿ ನೌಕರರ ಏಳನೆ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸರ್ಕಾರದ ಗಮನ ತಂದು ಜಾರಿಗೆ ಪ್ರಯತ್ನಿಸಬೇಕು ಎಂದ ಅವರು, ಎನ್.ಪಿ.ಎಸ್ ರದ್ಧುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ನೂತನ ಶಾಸಕರಾದ ಭೀಮಣ್ಣ ನಾಯ್ಕ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ಹಾಗೂ ನಿವೃತ್ತ ನೌಕರರನ್ನು ಸಂಘದ ಪರವಾಗಿ ಅಭಿನಂದಿಸಲಾಯಿತು. ಎಸ್.ಎಸ್.ಎಲ್.ಸಿಯಲ್ಲಿ 95% ಕ್ಕಿಂತ ಅಧಿಕ ಹಾಗೂ ಪಿಯುಸಿಯಲ್ಲಿ 90% ಕ್ಕಿಂತ ಅಧಿಕ ಅಂಕ ಗಳಿಸಿದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ಮಾತನಾಡಿದರು. ಈ ವೇಳೆ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಪ್ರಶಾಂತ ಜಿ.ಎಸ್., ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ನಾಯ್ಕ, ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜಪ್ಪ ಉಪಸ್ಥಿತರಿದ್ದರು. ಸರ್ಕಾರಿ ನೌಕರರ ಸಂಘದ ಖಜಾಂಚಿ ತೇಜಸ್ವಿ ನಾಯ್ಕ ಸ್ವಾಗತಿಸಿದರು. ಭೂಮಾಪನ ಇಲಾಖೆಯ ಉಷಾ ಪ್ರಶಾಂತ ನಾಯ್ಕ ನಿರೂಪಿಸಿದರು. ಪರಶುರಾಮ ನಾಯ್ಕ ಕಡಕೇರಿ ವಂದಿಸಿದರು.