ಬೆಂಗಳೂರು: ಕಾವೇರಿ ನೀರಿನ ವಿವಾದ ತಾರಕಕ್ಕೇರಿದ್ದು, ಕರ್ನಾಟಕದ ರೈತರಿಗೆ ಅನ್ಯಾಯ ಮಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಭಾರೀ ಪ್ರತಿಭಟನೆ ನಡೆಸುತ್ತಿದೆ.
ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ. ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಕಾಗೇರಿ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಬಿಜೆಪಿ ನಾಯಕರು ಖಾಲಿ ಕೊಡ ಹಾಗೂ ಬಿತ್ತಿ ಪತ್ರಗಳನ್ನು ಹಿಡಿದುಕೊಂಡು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ನಿಮಗೆ ಯೋಗ್ಯತೆ ಇದ್ದರೆ ಸಮಸ್ಯೆ ಪರಿಹಾರ ಮಾಡಿ. ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಎಲ್ಲರೂ ಸೇರಿ ನಾವು ಬೆಂಗಳೂರಿನಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ. ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು ಎಂದು ದೇವೇಗೌಡರು ಕೂಡಾ ಹೇಳಿದ್ದಾರೆ. ಕಾಂಗ್ರೆಸ್ ಮುಖಂಡರು ತಮಿಳುನಾಡು ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದಿದ್ದಾರೆ. ಇನ್ನೊಂದೆಡೆ ಮಂಗಳವಾರ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.