ಸಿದ್ದಾಪುರ: ಶಿರಸಿ-ಸಿದ್ದಾಪುರ ತಾಲೂಕಿನಾದ್ಯಂತ ಅಡಿಕೆಗೆ ಎಲೆಚುಕ್ಕಿ ರೋಗ ಉಲ್ಬಣಗೊಂಡಿದ್ದು, ಸೂಕ್ತ ಪರಿಹಾರ ನೀಡುವಂತೆ ಶಾಸಕ ಭೀಮಣ್ಣ ನಾಯ್ಕ ಗುರುವಾರ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಒತ್ತಾಯಿಸಿದರು.
ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಈ ಕುರಿತು ಭೀಮಣ್ಣ ನಾಯ್ಕ ಸುದೀರ್ಘ ಸಮಾಲೋಚನೆ ನಡೆಸಿದರು. ಶಿರಸಿ ಹಾಗೂ ಸಿದ್ದಾಪುರ ತಾಲೂಕಿನಲ್ಲಿ ಕಳೆದ ಒಂದು ವರ್ಷದಿಂದ ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ ಹರಡಿ ಕೆಲವೆಡೆ ಗಿಡಗಳು ಸಾವನ್ನಪ್ಪುತ್ತಿವೆ. ಹತ್ತಾರು ವರ್ಷದಿಂದ ಪೋಷಿಸಿದ ಅಡಿಕೆ ಗಿಡಗಳು ರೋಗದಿಂದ ನಾಶವಾಗುತ್ತಿರುವುದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಸರ್ಕಾರ ಅಡಿಕೆ ಕೃಷಿಕರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು.
ಶಾಸಕ ಭೀಮಣ್ಣ ನಾಯ್ಕ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಮಲ್ಲಿಕಾರ್ಜುನ ಮಾತನಾಡಿ, ಎಲೆಚುಕ್ಕಿ ರೋಗಕ್ಕೆ ಪರಿಹಾರ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ಕ್ಷೇತ್ರದ ಸರ್ಕಾರಿ ಆಸ್ಪತ್ರೆಗಳ ಕುಂದುಕೊರತೆ ನಿವಾರಿಸುವಂತೆ ಆರೋಗ್ಯ ಸಚಿವ ದಿನೇಶ ಗುಂಡುರಾವ್ ಅವರಿಗೆ ಮನವಿ ಮಾಡಿದ್ದು, ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆAದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದ್ದಾರೆ.