ಶಿರಸಿ: ಮಲೆನಾಡು, ಕರಾವಳಿ ಹಾಗೂ ಮಧ್ಯ ಕರ್ನಾಟಕ ಭಾಗದ ಹಲವು ಕಡೆ ಅಡಿಕೆ ಬೆಳೆಗೆ ಕಾಡುತ್ತಿರುವ ಎಲೆ ಚುಕ್ಕಿ ರೋಗದ ವಿಷಯ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪವಾಗಿದೆ. ಪರಿಷತ್‌ನಲ್ಲಿ ಪರಿಷತ್ ಸದಸ್ಯ ರುದ್ರೇಗೌಡ ಎಲೆ ಚುಕ್ಕಿ ರೋಗದ ತೀವ್ರತೆ ಬಗ್ಗೆ ಪ್ರಸ್ತಾಪಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಸರ್ಕಾರದ ಪರವಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಈ ಬಗ್ಗೆ ಉತ್ತರ ನೀಡಿದ್ದು, ಈ ಎಲೆ ಚುಕ್ಕೆ ರೋಗ ರೈತರಿಗೆ ತೊಂದರೆ ಕೊಡುತ್ತಿದೆ. ಇದರಿಂದ ಸಾಕಷ್ಟು ಹಾನಿಯಾಗಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಇದನ್ನು ತೊಡೆದುಹಾಕಲು ಸಾಕಷ್ಟು ಪ್ರಮಾಣದಲ್ಲಿ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈ ರೋಗದಿಂದ ತೊಂದರೆಗೆ ಒಳಗಾದ ರೈತರಿಗೆ ಈಗಾಗಲೇ ಸರ್ಕಾರದಿಂದ ಪರಿಹಾರ ಕೊಡಲಾಗಿದೆ ಎಂದು ತಿಳಿಸಿದರು.
ರಾಜ್ಯದ 7 ಜಿಲ್ಲೆಗಳಲ್ಲಿನ 53,977.04 ಹೆಕ್ಟೇರ್‌ಗೂ ಹೆಚ್ಚಿನ ಅಡಿಕೆ ತೋಟಗಳು ಎಲೆಚುಕ್ಕಿ ರೋಗದಿಂದ ನಾಶವಾಗುವ ಹಂತ ತಲುಪಿವೆ. ಇದರ ನಿಯಂತ್ರಣಕ್ಕೆ ನಿರ್ದಿಷ್ಟವಾದ ಔಷಧ ಇಲ್ಲದಿರುವುದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಮಲೆನಾಡು ಜಿಲ್ಲೆಗಳಲ್ಲಿ ಈ ರೋಗ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶೇ.74 ಅಡಿಕೆ ತೋಟ ನಾಶವಾಗಿದೆ.
ಈ ವರ್ಷ ರೋಗ ವ್ಯಾಪಕವಾಗಿ ಹರಡುತ್ತಿರುವುದರಿಂದ ಅಡಿಕೆ ಬೆಳೆಗಾರರು ಆತಂಕಗೊಂಡಿದ್ದರು. ಎಲೆಚುಕ್ಕಿ ರೋಗದಿಂದ ತೋಟ ನಾಶವಾಗಿದ್ದರಿಂದ ಮುಂದೇನು ಮಾಡಬೇಕೆಂದು ತೋಚದೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಶೃಂಗೇರಿ ತಾಲೂಕಿನಲ್ಲಿ ಸುಮಾರು 400ಕ್ಕೂ ಹೆಚ್ಚು ಕುಟುಂಬಗಳು ಊರು ತೊರೆದಿದ್ದರು.
ಈ ರೋಗದ ನಿಯಂತ್ರಣಕ್ಕೆ ಔಷಧಿಯನ್ನು ಕಂಡು ಹಿಡಿಯಬೇಕೆಂಬ ಉದ್ದೇಶದಿಂದ ಶೃಂಗೇರಿ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ಕೇಂದ್ರಗಳನ್ನು ತೆರೆಯಲಾಗಿದೆಯಾದರೂ, ಇವುಗಳಿಗೆ ವಿಜ್ಞಾನಿಗಳನ್ನು ನಿಯೋಜಿಸಲಾಗಿರಲಿಲ್ಲ, ಅಲ್ಲದೆ, ಅಗತ್ಯ ಹಣಕಾಸಿನ ನೆರವೂ ನೀಡಲಾಗಿರಲಿಲ್ಲ. ಹೀಗಾಗಿ ಈ ಸಂಶೋಧನಾ ಕೇಂದ್ರಗಳು ಇದ್ದೂ ಇಲ್ಲದಂತಾಗಿದ್ದವು. ಈ ಕುರಿತು ಮಲೆನಾಡು ಪ್ರಾಂತ ಅಡಿಕೆ ಬೆಳೆಗಾರರ ಸಂಘ ಹಲವು ಬಾರಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿತ್ತು. ಆದರೂ ಪ್ರಯೋಜನವಾಗಿರಲಿಲ್ಲ.
ಈ ನಡುವೆ ಈಗ ಅಧಿವೇಶನದಲ್ಲಿಯೂ ಈ ವಿಷಯ ಪ್ರಸ್ತಾಪವಾಗಿದ್ದು, ಎಲೆ ಚುಕ್ಕಿ ರೋಗದ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದೆ.