ಭಟ್ಕಳ: ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆಗಲಿದ್ದು, ಇದಕ್ಕೂ ಪೂರ್ವದಲ್ಲಿ ಜಿಲ್ಲಾ ಮೆಡಿಕಲ್ ಕಾಲೇಜನ್ನು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿಸಲು ಎಲ್ಲಾ ಸಿದ್ಧತೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಶನಿವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಜಿಲ್ಲಾ ಕೇಂದ್ರವಾದ ಕಾರವಾರದಲ್ಲಿ ಮೆಡಿಕಲ್ ಕಾಲೇಜು ಇದ್ದು, ಸದ್ಯಕ್ಕೆ ಇದನ್ನೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮಾಡಿ ಸಾಮಾನ್ಯ ಜನರಿಗೆ ಉತ್ತಮ ರೀತಿಯ ಚಿಕಿತ್ಸೆ ಕೊಡಲು ಎಲ್ಲಾ ವ್ಯವಸ್ಥೆ ಕಲ್ಪಿಸುತ್ತೇವೆ. ಆ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೇ ಕುಮಟಾ ಅಥವಾ ಹೊನ್ನಾವರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ಜನರಿಗೆ ನಾನು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಾಗಿ ಆಶ್ವಾಸನೆ ನೀಡಿದ್ದು, ನೀಡಿದ ಆಶ್ವಾಸನೆಯಂತೆ ಕುಮಟಾ ಅಥವಾ ಹೊನ್ನಾವರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದರು.
ಕರಾವಳಿಯ ಮೂರು ಜಿಲ್ಲೆಯ ಸಮುದ್ರ ಮತ್ತು ಸಮುದ್ರ ತೀರದಲ್ಲಿ ಪ್ಲಾಸ್ಟಿಕ್ ನಿಷೇಧದ ಜೊತೆಗೆ ಸ್ವಚ್ಛತೆಗಾಗಿ 840 ಕೋಟಿ ವೆಚ್ಚದಲ್ಲಿ ಹೊಸ ಯೋಜನೆ ಜಾರಿಗೆ ತರಲಾಗುತ್ತಿದ್ದು, ಮೂರು ತಿಂಗಳಲ್ಲಿ ಇದು ಅನುಷ್ಠಾನಗೊಳ್ಳಲಿದೆ. ಈ ಯೋಜನೆಯನ್ನು ಅರಣ್ಯ, ಮೀನುಗಾರಿಕೆ, ಪಂಚಾಯತ್ ರಾಜ್, ನಗರಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ನಡೆಸಲಾಗುತ್ತದೆ. ಇಂತಹ ಯೋಜನೆ ವಿದೇಶದಲ್ಲಿದ್ದು, ನಮ್ಮ ರಾಜ್ಯದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಕ್ಕೆ ಬರಲಿದೆ ಎಂದರು.