ದಾಂಡೇಲಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದ ಕೆ.ಸಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಆನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಾರ್ಯಾಲಯದ ಕಂದಾಯ ನಿರೀಕ್ಷಕರಾದ ರಾಘವೇಂದ್ರ ಪಾಟೀಲ್ ಮೂಲಕ ನೀಡಲಾಯಿತು.
ಮುಖ್ಯಮಂತ್ರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ನಗರದ ಇಎಸ್ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು. ಜಿ ಪ್ಲಸ್2 ಆಶ್ರಯ ಮನೆ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ಮುಗಿಸಿ ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ವಿತರಣೆಗೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು. ಕೆಎಚ್‌ಬಿ ನಿವೇಶನ ಹಂಚಿಕೆಗೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು. ದಾಂಡೇಲಿ ತಾಲೂಕಿಗೆ ಅವಶ್ಯವಾಗಿ ಬೇಕಾಗಿರುವ ತಾಲೂಕು ಮಟ್ಟದ ಕಚೇರಿಗಳನ್ನು ಪ್ರಾರಂಭಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕು. ದಾಂಡೇಲಿಯಿಂದ ಧಾರವಾಡಕ್ಕೆ ಹೋಗುವ ರಸ್ತೆ ತೀವ್ರ ಹದಗೆಟ್ಟಿದ್ದು, ಈ ರಸ್ತೆ ದುರಸ್ತಿಗೆ, ಶೀಘ್ರ ಕ್ರಮವನ್ನು ಕೈಗೊಳ್ಳಬೇಕು. ಸಗಿತಗೊಂಡಿರುವ ರೈಲು ಸಂಚಾರವನ್ನು ಪುನರಾರಂಭಿಸಬೇಕೆಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್, ಸಿಐಟಿಯು ಮುಖಂಡ ಸಲೀಂ ಸೈಯದ್, ಕರವೇ (ನಾ) ಬಣದ ತಾಲೂಕು ಅಧ್ಯಕ್ಷರಾದ ಸಾಧಿಕ್ ಮುಲ್ಲಾ ಮೊದಲಾದವರು ಮಾತನಾಡಿ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಲು ತ್ವರಿತ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.