ಜೋಯಿಡಾ : ತಾಲೂಕು ಕೇಂದ್ರದಲ್ಲಿರುವ ತಾಲೂಕು ಪಂಚಾಯತ್ ಸಭಾಭವನದಲ್ಲಿ ಸಾಮಾನ್ಯ ಸಭೆಯನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಪಂಚಾಯತ್ ಆಡಳಿತಾಧಿಕಾರಿಯಾಗಿರುವ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಹೊನ್ನಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಆರಂಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಆನಂದ್ ಬಡಕುಂದ್ರಿ ಅವರು ಸ್ವಾಗತಿಸಿದರು.
ಸಭೆಯಲ್ಲಿ ತಾಲ್ಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು. ಕುಡಿಯುವ ನೀರು, ರಸ್ತೆ, ಮೂಲಸೌಕರ್ಯ ಹಾಗೂ ಗ್ರಾಮ ಪಂಚಾಯ್ತ ಮಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಯ್ತು. ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಶ್ರೀಕ್ಷೇತ್ರ ಉಳವಿ ಜಾತ್ರೆಯ ಕುರಿತಂತೆ ತಾಲೂಕಾಡಳಿತದಿಂದ ಆಗಬೇಕಾದ ಪೂರ್ವ ತಯಾರಿಯ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಆರೋಗ್ಯ ಇಲಾಖೆ, ಶಿಕ್ಷಣ, ಲೋಕೋಪಯೋಗಿ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕುಡಿಯುವ ನೀರು ಸರಬರಾಜು, ಜಿಲ್ಲಾ ಪಂಚಾಯ್ತು ಪಂಚಾಯ್ತು ರಾಜ್ ಇಂಜೀನಿಯರಿಂಗ್ ವಿಭಾಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹೆಸ್ಕಾಂ ಇಲಾಖೆಯ ಅಧಿಕಾರಿಗಳು ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯ್ತುಗಳ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಹಾಗೂ ತಾಲೂಕು ಪಂಚಾಯ್ತ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.