ಕಾರವಾರ: ಸಂವಿಧಾನದ ಮಹತ್ವ ಮತ್ತು ಆಶಯಗಳ ಕುರಿತಂತೆ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾದ ಮೂಲಕ ಜಾಗೃತಿ ಮೂಡಿಸುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಆಯೋಜನೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ 229 ಗ್ರಾಮ ಪಂಚಾಯತ್ಗಳಲ್ಲಿ ಈ ಜಾಗೃತಿ ಜಾಥಾ ಸಂಚರಿಸುವಂತೆ ಯೋಜನೆ ರೂಪಿಸಿ ಗ್ರಾಮ ಪಂಚಾಯತ್ಗಳಿಗೆ ಆಗಮಿಸುವ ಜಾಥಾವನ್ನು ಸ್ಥಳೀಯಾಡಳಿತಗಳು ಸ್ವಾಗತಿಸಿ, ಸಾರ್ವಜನಿಕರಿಗೆ ಸಂವಿಧಾನ ಪೀಠಿಕೆಯ ಪ್ರತಿಗಳನ್ನು ವಿತರಿಸಿ ಸಂವಿಧಾನ ಮಹತ್ವ ಕುರಿತು ಅರಿವು ಮೂಡಿಸಬೇಕು ಎಂದರು.
ಗ್ರಾಮ ಪಂಚಾಯತ್ನಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಗ್ರಾಮದಲ್ಲಿ ಅನುಷ್ಠಾನವಾಗಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು. ಇದುವರೆಗೆ ಯೋಜನೆಗೆ ಒಳಪಡದ ಕುಟುಂಬಗಳು ಮತ್ತು ಅರ್ಹ ಫಲಾನುಭವಿಗಳಿದ್ದಲ್ಲಿ ಅವರನ್ನು ಗುರುತಿಸಿ, ಅವರಿಗೆ ಯೋಜನೆಗಳನ್ನು ಮಂಜೂರು ಮಾಡಲು ಕ್ರಮಕೈಗೊಳ್ಳಬೇಕು ಹಾಗೂ ಯೋಜನೆಯ ನೊಂದಣಿಯಲ್ಲಿ ಸಮಸ್ಯೆಗಳು ಇದ್ದಲ್ಲಿ ಸ್ಥಳದಲ್ಲೇ ಅವುಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದರು. ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಜನಪರ ಯೋಜನೆಗಳು ಮತ್ತು ಸೌಲಭ್ಯಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ತಲುಪಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಸಚಿವರು ತಿಳಿಸಿದರು. ಸಂವಿಧಾನ ಜಾಗೃತಿ ಕುರಿತು ಜಾಥಾಗೆ ಸಚಿವರು ಜನವರಿ 26 ರಂದು ಚಾಲನೆ ನೀಡಲಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ,ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.