ಕಾರವಾರ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕಂಡು ಬರುವ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ಕುರಿತಂತೆ ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಕುರಿತ ಅಧಿಕಾರವನ್ನು ಮತ್ತು ಅನುದಾನವನ್ನು ಎಲ್ಲಾ ತಾಲೂಕುಗಳಿಗೆ ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್ ನಿರ್ದೇಶನ ನೀಡಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಈಗಲೇ ಗುರುತಿಸಿಕೊಂಡಿದ್ದು, ಆ ಭಾಗದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಿಯಾಯೋಜನೆ ರೂಪಿಸಿಕೊಳ್ಳಿ ಎಂದ ಅವರು, ಗ್ರಾಮೀಣ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಟೆಂಡರ್ ಕರೆಯುವ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಸಂಬಂಧಪಟ್ಟ ವಿಭಾಗದ ಉಪ ವಿಭಾಗಾಧಿಕಾರಿಗಳಿಗೆ ನೀಡಿ, ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿ, ಇದರಿಂದ ಸ್ಥಳೀಯ ನಿರಿನ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಸಾಧ್ಯವಾಗಲಿದೆ ಎಂದರು.
ಪ್ರಸಕ್ತ ಜಿಲ್ಲೆಯಲ್ಲಿ 16 ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿರುವ ಕುರಿತಂತೆ ಪರಿಶೀಲಿಸಿದ ಅವರು ಈ ಬಗ್ಗೆ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಜಾಗೃತಿ ಮೂಡಿಸುವಂತೆ ಹಾಗೂ ಆಸ್ಪತ್ರೆಗಳಲ್ಲಿ ಅವಶ್ಯಕವಿರುವ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ತಿಳಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವತಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ತಿಳಿಸಿದ ಅವರು ಜಲ ಜೀವನ್ ಮಿಷನ್ ಕಾಮಗಾರಿಗಳಿಗೆ ಅರಣ್ಯ ಇಲಾಖೆಯಿದ ನಿರಾಪೇಕ್ಷಣ ಪತ್ರ ಬಾಕಿ ಇರುವ ಕುರಿತು ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಶೇ.100 ರಷ್ಟು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಲಾಖೆಗಳು ಕಾರ್ಯನಿರ್ವಹಿಸಬೇಕು. ಯುವನಿಧಿ ಯೋಜನೆಗೆ ಅರ್ಹರಿರುವ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸುವಂತೆ ತಿಳಿಸಿದರು.
ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ ಕಾಮಗಾರಿ, ಶಾಲಾ ಶೌಚಾಲಯ ಕಾಮಗಾರಿ, ವಿವೇಕ ಕೊಠಡಿಗಳ ಕಾಮಗಾರಿಗಳು ಸೇರಿದಂತೆ ಎಲ್ಲಾ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಸೂಚಿಸಿದ ಅವರು ಲೋಕಸಭಾ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ಎಲ್ಲಾ ಕಾಮಗಾರಿಗಳಿಗೆ ಟೆಂಡರ್ ಮತ್ತಿತರ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಕಾಮಗಾರಿಗಳನ್ನು ಆರಂಭಿಸಿ ಎಂದು ನಿರ್ದೇಶನ ನೀಡಿದರು.
ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೊಂದರೆಯಾಗದಂತೆ ಬಸ್ ಓಡಾಟ ನಡೆಸುವಂತೆ ಕೆ.ಎಸ್.ಆರ್.ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ ಉಸ್ತುವಾರಿ ಕಾರ್ಯದರ್ಶಿಗಳು ಶಾಲಾ ಕೊಠಡಿಗಳ ದುರಸ್ತಿಗೆ ಅನುದಾನ ಬಿಡುಗಡೆ ಸಂದರ್ಭದಲ್ಲಿ ಶಾಲೆಗಳ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯಮಟ್ಟದಲ್ಲಿ ಬಗೆಹರಿಯಬೇಕಾದ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿನ ಸಮಸ್ಯೆಗಳ ಕುರಿತು ಸಂಪೂರ್ಣ ವಿವರಗಳನ್ನು ತಮಗೆ ಸಲ್ಲಿಸುವಂತೆ ತಿಳಿಸಿದ ಅವರು ಈ ಸಮಸ್ಯೆಗಳ ಬಗ್ಗೆ ರಾಜ್ಯಮಟ್ಟದಲ್ಲಿ ಸಂಬಂಧಪಟ್ಟ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾಧಿಕಾರಿ (ಪ್ರಭಾರ) ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.