ಕಾರವಾರ: ಕಾಲುಬಾಯಿ ರೋಗ ತಡೆಗಟ್ಟಲು ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಮತ್ತು ಯಾವುದೇ ಕಾರಣಕ್ಕೆ ನಿರ್ಲಕ್ಷ್ಯ ಮಾಡಬಾರದು. ನಿರ್ಲಕ್ಷ್ಯ ಮಾಡಿದರೆ ಒಂದು ಜಾನುವಾರುವಿನಿಂದ ಮತ್ತೊಂದು ಜಾನುವಾರುಗಳಿಗೆ ರೋಗ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 5ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಾನುವಾರುಗಳಿಗೆ ಕಾಲುಬಾಯಿ ರೋಗ ತಡೆಗಟ್ಟಲು ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ 30 ರ ವರೆಗೆ ನಡೆಯುವ 5 ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು ಹಾಗೂ ಈ ಸಂಬಂಧ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆಯಿಂದ ಹೊರ ಉಳಿಯದಂತೆ ಮಾಡಲು ಜಿಲ್ಲೆಯ ಎಲ್ಲಾ ನಗರ ಮತ್ತು ಗ್ರಾಮ ಮಟ್ಟದಲ್ಲಿ ವ್ಯಾಪಕ ಪ್ರಚಾರ ಮತ್ತು ಸ್ವಚ್ಛತೆ ವಾಹನಗಳಲ್ಲಿ ಜಿಂಗಲ್ಸ್ ಹಾಕಿ ರೈತರಿಗೆ ಲಸಿಕೆ ಹಾಕಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ಮಾಹಿತಿ ನೀಡುವಂತೆ ಪಶುಪಾಲನ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ಪಶುಪಾಲನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಪ್ರತಿ ಆರು ತಿಂಗಳಿಗೊಮ್ಮೆ ನಡೆಯುವ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಸದುಪಯೋಗವನ್ನು ಜಿಲ್ಲೆಯ ಎಲ್ಲಾ ರೈತರು, ಜಾನುವಾರು ಸಾಕಾಣಿಕೆದಾರರು ಪಡೆಯಬೇಕು ಹಾಗೂ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಬೇಕೆಂದು ತಿಳಿಸಿದರು.
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಮೋಹನ ಮಾತನಾಡಿ, ಜಿಲ್ಲೆಯ ರೈತರ ಮನೆ ಮನೆಗೆ ತೆರಳಿ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕುವುದರ ಮೂಲಕ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು ಎಂದರು.
ಸಭೆಯಲ್ಲಿ ಎಲ್ಲ ತಾಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು, ಕೆಎಂಎಫ್ ಅಧಿಕಾರಿ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.