ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ನಡೆಯುತಿದ್ದು, ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಗಳು ಚುನಾವಣಾ ವೆಚ್ಚದ ಕುರಿತಂತೆ ಪ್ರತ್ಯೇಕ ಹೊಸ ಬ್ಯಾಂಕ್ ಖಾತೆ ತರೆದು ಆ ಖಾತೆಯ ಮೂಲಕವೇ ಅಗತ್ಯ ವೆಚ್ಚಗಳನ್ನು ಮಾಡಬೇಕಿದೆ.
ಆದರೆ ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ಕೆಲವು ಅಭ್ಯರ್ಥಿಗಳು ಪ್ರತ್ಯೇಕವಾಗಿ ಹೊಸ ಬ್ಯಾಂಕ್ ಖಾತೆ ತೆರೆಯಲು ರಾಷ್ಟ್ರೀಕೃತ ಬ್ಯಾಂಕ್ನ ಪ್ರಕ್ರಿಯೆಗಳು ವಿಳಂಬವಾಗುತ್ತಿವೆ ಎಂದು ತಿಳಿಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ಗಳು ಚುನಾವಣೆಗೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳ ಬ್ಯಾಂಕ್ ಖಾತೆ ತೆರೆಯುವ ಕುರಿತು ನೀಡುವ ಅರ್ಜಿಯನ್ನು ಆದ್ಯತೆಯಲ್ಲಿ ಪರಿಶೀಲಿಸಿ ಅದೇ ದಿನ ಹೊಸ ಪಾಸ್ ಬುಕ್ ವಿತರಿಸುವಂತೆ ಎಲ್ಲಾ ಬ್ಯಾಂಕ್ ಗಳಿಗೆ ನಿರ್ದೇಶನ ನೀಡಿರುವ ಜಿಲ್ಲಾಧಿಕಾರಿಗಳು, ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಅಂಚೆ ಕಚೇರಿಯಲ್ಲಿರುವ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾತೆಯ ಪಾಸ್ ಬುಕ್ ಕೂಡಾ ಸಲ್ಲಿಸಬಹುದಾಗಿದ್ದು, ಇಲ್ಲಿ ಹೊಸ ಬ್ಯಾಂಕ್ ಖಾತೆ ತೆರೆಯುವ ಪ್ರಕ್ರಿಯೆ ಶೀಘ್ರವಾಗಿದ್ದು, ಇದನ್ನು ಕೂಡ ಬಳಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.