ಕಾರವಾರ: ರಾಜ್ಯದಲ್ಲಿ ಮಾರ್ಚ್–ಏಪ್ರಿಲ್ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಗಣನೀಯ ಸಾಧನೆ ತೋರಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 5 ನೇ ಸ್ಥಾನ (ಕಳೆದ ಬಾರಿ 12 ನೇ ಸ್ಥಾನ) ಪಡೆದಿದ್ದು, ಶೇ.86.54 ಫಲಿತಾಂಶ ಬಂದಿದೆ, ಪರೀಕ್ಷೆಗೆ ಹಾಜರಾದ 9,842 ವಿದ್ಯಾರ್ಥಿಗಳಲ್ಲಿ 8,517 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದೇ ರೀತಿ ಶಿರಸಿ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 8 ನೇ ಸ್ಥಾನ (ಕಳೆದ ಬಾರಿ 23 ನೇ ಸ್ಥಾನ) ಪಡೆದಿದ್ದು, ಶೇ.84.64 ಫಲಿತಾಂಶ ಬಂದಿದ್ದು, ಪರೀಕ್ಷೆಗೆ ಹಾಜರಾದ 10,046 ವಿದ್ಯಾರ್ಥಿಗಳಲ್ಲಿ 8,503 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಶಿರಸಿಯ 3 ಮಂದಿ ವಿದ್ಯಾರ್ಥಿಗಳು 625 ಕ್ಕೆ 624 ಪಡೆದು ರಾಜ್ಯಕ್ಕೆ ದ್ವಿತೀಯ ಮತ್ತು ಒಬ್ಬ ವಿದ್ಯಾರ್ಥಿ 623 ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿರುವುದು ಇಡೀ ಜಿಲ್ಲೆಗೆ ಹೆಮ್ಮೆ ಪಡುವ ವಿಷಯವಾಗಿದೆ ಎಂದಿದ್ದಾರೆ.
ಜಿಲ್ಲೆಯಲ್ಲಿ ಈ ಬಾರಿಯ ಫಲಿತಾಂಶ ವೃದ್ಧಿಗಾಗಿ ಶಿಕ್ಷಣ ಇಲಾಖೆ ವತಿಯಿಂದ ಹಲವು ಶೈಕ್ಷಣಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಲ್ಲಾ ಶಾಲೆಗಳ ಮುಖ್ಯ ಗುರುಗಳು ಮತ್ತು ಶಿಕ್ಷಕರೊಂದಿಗೆ ನಿರಂತರ ಸಭೆಗಳನ್ನು ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದ್ದರು. ಡಿಸೆಂಬರ್ ವೇಳೆಗೆ ಎಲ್ಲಾ ವಿಷಯವಾರು ಭೋದನೆಯನ್ನು ಮುಕ್ತಾಯಗೊಳಿಸಿ, ಮಾರ್ಚ್ ವರೆಗೆ ಪುರ್ನಮನನ ಕಾರ್ಯಕ್ರಮ ನಡೆಸಲಾಯಿತು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡಿ ಸಜ್ಜುಗೊಳಿಸಲಾಯಿತು. ಶಾಲಾ ಮತ್ತು ತಾಲೂಕು ಹಂದಲ್ಲಿ ನುರಿತಿ ಶಿಕ್ಷಕರು ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ಕೋಚಿಂಗ್ ವ್ಯವಸ್ಥೆ ಮಾಡಲಾಗಿತ್ತು. ಗುಣಮಟ್ಟದ ಫಲಿತಾಂಶಕ್ಕಾಗಿ ಶಾಲಾ ಹಂತದ ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಉಚಿತ ಊಟ ವಸತಿಯೊಂದಿಗೆ 1 ವಾರದ ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲದೇ ಶಾಲೆಯ ಮುಖ್ಯ ಗುರುಗಳು ಮತ್ತು ಶಿಕ್ಷಕರಿಗೂ ತಾಲೂಕು ಮಟ್ಟದಲ್ಲಿ ತರಬೇತಿಗಳನ್ನು ಆಯೋಜಿಸುವುದರ ಜೊತೆಗೆ, ಮಕ್ಕಳ ಕಲಿಕೆಯ ಕುರಿತಂತೆ ನಿರಂತರವಾಗಿ ಶಿಕ್ಷಕರು ಮತ್ತು ಪೋಷಕರೊಂದಿಗೆ ಅನುಪಾಲನೆ ಮಾಡಲಾಗಿತ್ತು.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಭೆಗಳನ್ನು ಆಯೋಜಿಸಿ, ಅಗತ್ಯ ಸೂಚನೆ ಮಾರ್ಗದರ್ಶನಗಳನ್ನು ನೀಡಿದ್ದು, ಅವುಗಳ ಅನುಸರಣೆ ಜೊತೆಗೆ ಜಿಲ್ಲೆಯ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲಾ ಶಾಸಕರಗಳು ನಿರ್ದೇಶನಗಳ ಪಾಲನೆ ಹಾಗೂ ಸಂಘಟಿತ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದೆ.
ಅದರಲ್ಲೂ ಪ್ರಮುಖವಾಗಿ ಮಾನ್ಯ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಗರಿಷ್ಠ ಫಲಿತಾಂಶ ಪಡೆಯುವ ತಾಲೂಕುಗಳಿಗೆ ತಮ್ಮ ಒಂದು ತಿಂಗಳ ವೇತನದ ಮೊತ್ತವನ್ನು ಬಹುಮಾನವನ್ನಾಗಿ ನೀಡುವ ಘೋಷಣೆಯನ್ನು ಮಾಡಿದ್ದು, ಇದು ತಾಲೂಕುಗಳ ಮಟ್ಟದಲ್ಲಿ ಅಧಿಕಾರಿಗಳು ಇನ್ನಷ್ಟು ಉತ್ಸಾಹದಿಂದ ಫಲಿತಾಂಶ ವೃದ್ಧಿಗೆ ಆರೋಗ್ಯಕರ ಪೈಪೋಟಿಯಿಂದ ಕರ್ತವ್ಯ ನಿರ್ವಹಿಸಲು ಪ್ರೇರಣೆಯಾಯಿತು ಎನ್ನುತ್ತಾರೆ ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿದೇಶಕರುಗಳು.
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ದೃತಿಗೆಡುವ ಅವಶ್ಯಕತೆಯಿಲ್ಲ. ನಿಮಗೆ ಉತ್ತೀಣರಾಗಲು ಮತ್ತೊಂದು ಅವಕಾಶವಿದ್ದು, ಜೂನ್ 7 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-2 ರಲ್ಲಿ ತಮಗೆ ಪುನಃ ಪರೀಕ್ಷೆ ಬರೆಯಲು ಅವಕಾಶವಿದೆ. ಜಿಲ್ಲೆಯ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಶಿಕ್ಷಕರು ಪ್ರಸ್ತುತ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ, ಪರೀಕ್ಷೆ-2 ಗೆ ಅವರಿಗೆ ಅಗತ್ಯ ತರಬೇತಿ ನೀಡುವುದರ ಮೂಲಕ ಅವರೂ ಕೂಡಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಜಿಲ್ಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶೇ.100 ಸಾಧನೆ ಮಾಡಲು ತಮ್ಮ ಶಕ್ತಿ ಮೀರಿ ಶ್ರಮಿಸಬೇಕು. ; ಗಂಗೂಬಾಯಿ ಮಾನಕರ, ಜಿಲ್ಲಾಧಿಕಾರಿ,