ಕಾರವಾರ: ಡೆಂಗಿ ರೋಗ ನಿಯಂತ್ರಣ ಆರೋಗ್ಯ ಇಲಾಖೆಯ ಜವಾಬ್ದಾರಿ ಮಾತ್ರವಲ್ಲದೇ, ಸಮುದಾಯದಲ್ಲಿನ ಪ್ರತಿಯೊಬ್ಬ ಸಾರ್ವಜನಿಕರ ಜವಾಬ್ದಾರಿಯೂ ಆಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಪ್ರಸಾರ ಇಲಾಖೆ, ಬಾಪೂಜಿ/ಛತ್ರಪತಿ/ಸರಕಾರಿ ಜಿ.ಎನ್.ಎಂ ನರ್ಸಿಂಗ್ ವಿಜ್ಞಾನ ವಿದ್ಯಾಲಯ ಕಾರವಾರ ಇವರ ಸಹಯೋಗದಲ್ಲಿ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ರಾಷ್ಟ್ರೀಯ ಡೆಂಗಿ ದಿನ ಪ್ರಯುಕ್ತ ಆಯೋಜಿಸಿದ್ದ ಜಾಥಾ ಕಾರ್ಯಕ್ರಮ ಮತ್ತು ಮಾನವ ಸರಪಳಿ ಪ್ರದರ್ಶನ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.
ಮನೆಯ ಸುತ್ತಮುತ್ತ ಹಾಗೂ ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಜೊತೆಗೆ, ಸೊಳ್ಳೆಗಳಿಗೆ ಆಶ್ರಯ ತಾಣವಾದ ನೀರು ನಿಲ್ಲದಂತೆ ಎಚ್ಚರವಹಿಸುವ ಮೂಲಕ ಡೆಂಗಿ ನಿಯಂತ್ರಣ ಸಾಧ್ಯವಾಗಲಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದ್ದು, ಸಮುದಾಯದ ಪ್ರತಿಯೊಬ್ಬರ ಸಹಭಾಗಿತ್ವದಿಂದ ಡೆಂಗಿ ನಿರ್ಮೂಲನೆ ಸಾಧ್ಯವಾಗಲಿದೆ ಎಂದರು.
ಮಳೆಗಾಲದಲ್ಲಿ ಡೆಂಗಿ ರೋಗ ಉಲ್ಬಣಗೊಳ್ಳುವ ಸಾಧ್ಯತೆಗಳಿದ್ದು, ಮನೆ ಸುತ್ತಮುತ್ತಲಿನ ಪರಿಸರದಲ್ಲಿ ಮಳೆ ನೀರು ನಿಲ್ಲದಂತೆ ಜಾಗೃತಿ ವಹಿಸಬೇಕು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆಗಳನ್ನು ಬಳಸುವ ಮೂಲಕ ಸೊಳ್ಳೆಗಳು ಕಚ್ಚದಂತೆ ಎಚ್ಚರವಹಿಸುವ ಮೂಲಕ ಡೆಂಗಿಯಿಂದ ರಕ್ಷಣೆ ಪಡೆಯುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್, ಆರ್.ಸಿ.ಹೆಚ್ ಅಧಿಕಾರಿ ಡಾ.ನಟರಾಜ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಮೇಶ್ ರಾವ್, ತಾಲೂಕು ಆರೋಗ್ಯಾಧಿಕಾರಿ ಡಾ. ಸೂರಜ್ ನಾಯಕ್, ಡಾ. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ್ ಕನ್ನಕ್ಕನವರ್, ವಿವಿಧ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.