ಜೋಯಿಡಾ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಾಂಡೇಲಿ – ಜೊಯಿಡಾ ತಾಲೂಕು ಹಾಗೂ ಬಿಜಿವಿಎಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಂಯುಕ್ತ ಆಶ್ರಯದಡಿ ಬಿಜಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಭೋಜೆ ಅವರು ಧೂಮಪಾನ ಮತ್ತು ಹೊಗೆ ರಹಿತ ತಂಬಾಕು ಉತ್ಪನ್ನಗಳು ಸೇರಿದಂತೆ ತಂಬಾಕು ಸೇವೆನೆಯಿಂದ ಉಂಟಾಗುವ ಆರೋಗ್ಯದ ಅಪಾಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಶಿಕ್ಷಣ ನೀಡುವುದು ವಿಶ್ವ ತಂಬಾಕು ವಿರೋಧಿ ದಿನದ ಉದ್ದೇಶವಾಗಿದೆ. ತಂಬಾಕು ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಗಳನ್ನು ಮತ್ತು ಸಂಬಂಧಪಟ್ಟ ಸಂಸ್ಥೆಗಳನ್ನು ಉತ್ತೇಜಿಸುವುದೇ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಮುಖ ಆಶಯವಾಗಿದೆ ಎಂದರು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಮಂಜುನಾಥ್ ಶೆಟ್ಟಿ ಅವರು ವಿಶ್ವ ತಂಬಾಕು ರಹಿತ ದಿನವನ್ನು, ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ತಂಬಾಕು ಸೇವೆನೆಯನ್ನು ಕಡಿಮೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆಯ ನೇತೃತ್ವದಲ್ಲಿ ಜಾಗತಿಕ ಮಟ್ಟದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಸದಾ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಈ ದೇಶದ ಪ್ರಗತಿಗೆ ಕಾರಣರಾಗಬೇಕೆಂದು ಕರೆ ನೀಡಿದರು.
ಜೊಯಿಡಾದ ಆರೋಗ್ಯ ಇಲಾಖೆಯ ಗೀತಾ ನಾಯ್ಕ ಮತ್ತು ಅಂಜುಮ್ ಆರೋಗ್ಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಶಿವಾಜಿ ಜೋಮನ್ನವರ, ದೈಹಿಕ ಉಪನ್ಯಾಸಕರಾದ ಪಾಂಡುರಂಗ ಪಟಗಾರ ಉಪಸ್ಥಿತರಿದ್ದರು.