ಕಾರವಾರ: ಜಿಲ್ಲೆಯಲ್ಲಿ ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಡೆಯುವ ನಿಟ್ಟಿನಲ್ಲಿ ಜುಲೈ ೨೦೨೪ ರಿಂದ ಸೆಪ್ಟಂಬರ್ ೨೦೨೪ ರವರೆಗೆ, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿವತಿಯಿಂದ ಜಿಲ್ಲೆಯಲ್ಲಿನ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳ ವ್ಯಾಪಕ ತಪಾಸಣೆ ನಡೆಸಲಾಗುವುದು ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅನ್ನಪೂರ್ಣ ವಸ್ತ್ರದ್ ಹೇಳಿದರು.
ಅವರು ಶುಕ್ರವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ , ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಡೆ ಕುರಿತ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ೨೦೧೧ ರ ಜನಸಂಖ್ಯಾ ವರದಿಯಂತೆ ಲಿಂಗಾನುಪಾತದ ಪ್ರಮಾಣ ೯೫೫ ಇದ್ದು, ಪ್ರಸ್ತುತ ಜಿಲ್ಲೆಯಲ್ಲಿ ೭೧ ಸ್ಕ್ಯಾನಿಂಗ್ ಸೆಂಟರ್‌ಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಯಾವುದೇ ಕೇಂದ್ರಗಳಲ್ಲಿ ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಡೆಯದಂತೆ ಈಗಾಗಲೇ ತೀವ್ರ ನಿಗಾ ವಹಿಸಲಾಗಿದ್ದು, ಮುಂದಿನ ತ್ರೈಮಾಸಿಕ ಅವಧಿಯಲ್ಲಿ ಈ ಎಲ್ಲಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದರು.
ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಸರಕಾರದ ಮಾರ್ಗಸೂಚಿಯಂತೆ, ಅಗತ್ಯ ಅನುಮತಿಯನ್ನು ಪಡೆದಿರುವ ಬಗ್ಗೆ, ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಡೆಗೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಮತ್ತು ಸ್ಕ್ಯಾನಿಂಗ್ ಸೆಂಟರ್ ಗೆ ಭೇಟಿ ನೀಡುವ ಎಲ್ಲಾ ರೋಗಿಗಳ ಸಮಗ್ರ ಮಾಹಿತಿಯನ್ನು ನಿಗಧಿತ ರೀತಿಯಲ್ಲಿ ದಾಖಲಿಸಿ ಸಂರಕ್ಷಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಅವಧಿಯಲ್ಲಿ ಯಾವುದೇ ಮಾರ್ಗಸೂಚಿಗಳ ಉಲ್ಲಂಘನೆ ಕಂಡು ಬಂದಲ್ಲಿ ಅಂತಹ ಸ್ಕ್ಯಾನಿಂಗ್ ಸೆಂಟರ್ ಮತ್ತು ವೈದ್ಯರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಜಿಲ್ಲೆಯಲ್ಲಿನ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಶೇ. ೧೦೦ ರಷ್ಟು ತಪಾಸಣೆ ನಡೆಸಲಾಗಿದ್ದು, ಈ ಅವಧಿಯಲ್ಲಿ ಯಾವುದೇ ಹೊಸ ನೊಂದಣಿ ಮತ್ತು ನವೀಕರಣ ಮಾಡಿರುವುದಿಲ್ಲ ಎಂದರು.
ಸಭೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್, ವಕೀಲರಾದ ಮಾರುತಿ ಎಮ್ ಮರಜ್ಜ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಎಮ್ ನಾಯ್ಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಯೂಸುಫ್ ಖಾನ್ ,ಅಧೀಕ್ಷಕಸುಭಾಷ್ ಗಾಂವಕರ್ ಉಪಸ್ಥಿತರಿದ್ದರು. ರಿತೇಶ್ ಸಿ ನಾಯ್ಕ್ ಸ್ವಾಗತಿಸಿ,ವಂದಿಸಿದರು.