ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಗುರುತಿಸಿ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ “ಪಿಡಿಒ ಆಫ್ ದಿ ಮಂತ್” ಪ್ರಶಸ್ತಿಗೆ ಜೂನ್ ತಿಂಗಳಿಗೆ ಆಯ್ಕೆಯಾದ ಕಾರವಾರ ತಾಲೂಕಿನ ತೋಡೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಟಿ.ಸಿ ಗುರುವಾರ ಕಾರವಾರದ ಜಿಲ್ಲಾ ಪಂಚಾಯತಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು ಪ್ರಶಸ್ತಿ ಪತ್ರ ನೀಡಿ, ಅಭಿನಂದಿಸಿದರು.
ಗ್ರಾಮೀಣ ಮಟ್ಟದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಿ, ಸಾರ್ವಜನಿಕರಿಗೆ ಉತ್ಕೃಷ್ಟ ಸೇವೆ ಒದಗಿಸುವ ಮೂಲಕ ಮಾದರಿ ಕಾರ್ಯಕ್ಷಮತೆಯನ್ನು ತೋರಿದವರಿಗೆ ನಿಗದಿತ ಮಾನದಂಡಗಳನ್ನು ಆಧರಿಸಿ ಪಿಡಿಓ ಆಫ್ ದಿ ಮಂತ್ ಪ್ರಶಸ್ತಿ ನೀಡುತ್ತಿದ್ದೇವೆ. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವವರನ್ನು ಪ್ರೋತ್ಸಾಹಿಸಿ, ಇತರರನ್ನು ಅವರಂತೆ ಕೆಲಸ ಮಾಡಲು ಪ್ರೇರೇಪಿಸುವುದು ನಮ್ಮ ಆಶಯವಾಗಿದ್ದು, ಅದರಂತೆ ಪ್ರತಿ ತಿಂಗಳು ಅರ್ಹ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಈಶ್ವರ್ ಕಾಂದೂ ಹೇಳಿದರು.
ಪ್ರಶಸ್ತಿ ಪಡೆದು ಮಾತನಾಡಿದ ಮಂಜುನಾಥ ಟಿ.ಸಿ. ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದಿರುವುದಕ್ಕೆ ಸಂತಸವಿದೆ. ಇದು ಆರಂಭ. ಸಾಧನೆ ಹಾದಿಯಲ್ಲಿ ಮೈಲಿಗಲ್ಲು. ಸಾಗುವ ದಾರಿ, ಆಗಬೇಕಿರುವ ಕಾರ್ಯಗಳು ಸಾಕಷ್ಟಿವೆ. ಇನ್ನುಮುಂದೆಯೂ ಉತ್ತಮ ರೀತಿಯಲ್ಲಿ ಜನರಿಗೆ ಸೇವೆ ನೀಡಲು ಪ್ರಯತ್ನಿಸುತ್ತೇನೆ. ಮಾರ್ಗದರ್ಶನ ನೀಡಿ, ಸಹಕರಿಸಿದ ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ್, ಅಭಿವೃದ್ಧಿ ಶಾಖೆ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್ ಮತ್ತಿತರರು ಉಪಸ್ಥಿತರಿದ್ದರು.