ಶಿರಸಿ : ಡಿ. 3 ಮತ್ತು 4ರಂದು ಶಿರಸಿಯಲ್ಲಿ ನಡೆಯಲಿರುವ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಶಿಕ್ಷಕರು, ಉಪನ್ಯಾಸಕರು ಹಾಗೂ ಸರಕಾರಿ ನೌಕರರಿಗೆ ಅನ್ಯ ಕಾರ್ಯ ನಿಮಿತ್ತ ರಜೆ (ಓಓಡಿ) ಸೌಲಭ್ಯವನ್ನು ನೀಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ. ಎನ್. ವಾಸರೆ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಉತ್ತರ ಕನ್ನಡ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಈ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಶಿರಸಿ ಶೈಕ್ಷಣಿಕ ಜಿಲ್ಲೆಯ ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರು (ಆಡಳಿತ), ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಓಓಡಿ ಆದೇಶವನ್ನು ಜಾರಿ ಮಾಡಿದ್ದಾರೆ. ಹಾಗೂ ಜಿಲ್ಲೆಯ ಆಸಕ್ತ ಸರಕಾರಿ ನೌಕರರು ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಅನ್ಯಕಾರ್ಯ ನಿಮಿತ್ತ ರಜೆ (ಓಓಡಿ) ಆದೇಶವನ್ನು ನೀಡಿರುತ್ತಾರೆ. ಸಮ್ಮೇಳನದಲ್ಲಿ ಭಾಗವಹಿಸಿದವರು ಸಮ್ಮೇಳನದಲ್ಲಿ ಭಾಗವಹಿಸಿದ್ದರ ಬಗ್ಗೆ ಹಾಜರಿ ಪತ್ರವನ್ನು ಪಡೆದು ಸಂಬಂಧಿತ ಮೇಲಾಧಿಕಾರಿಗಳಿಗೆ ಒಪ್ಪಿಸ ತಕ್ಕದ್ದು ಎಂದು ಓಓಡಿ ಆದೇಶದಲ್ಲಿ ತಿಳಿಸಲಾಗಿದೆ.
ಜೊತೆಗೆ ವಿಶೇಷವಾಗಿ ಡಿಸೆಂಬರ್ 3 ರಂದು ನಡೆಯಲಿರುವ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಶಿರಸಿ ನಗರ ವ್ಯಾಪ್ತಿಯಲ್ಲಿರುವ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕ, ಶಿಕ್ಷಕಿಯರು ಕಡ್ಡಾಯವಾಗಿ ಭಾಗವಹಿಸುವಂತೆ ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರಾದ ಪಿ. ಬಸವರಾಜ ನಿರ್ದೇಶಿಸಿದ್ದಾರೆ.
ಸಾಹಿತ್ಯ ಸಮ್ಮೇಳನ ಎಂದರೆ ಇದು ಎಲ್ಲರನ್ನೂ ಒಳಗೊಳ್ಳುವ ಹಬ್ಬವಾಗಬೇಕು. ಹಾಗಾಗಿ ಡಿಸೆಂಬರ 3 ಮತ್ತು 4 ರಂದು ಶಿರಸಿಯಲ್ಲಿ ನಡೆಯಲಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಶಿಕ್ಷಕ, ಶಿಕ್ಷಕಿಯರು, ಉಪನ್ಯಾಸಕರು ಹಾಗೂ ಆಸಕ್ತ ಸರಕಾರಿ ನೌಕರರು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ಮನವಿ ಮಾಡಿದ್ದಾರೆ.