ಹಳಿಯಾಳ : ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕಚೇರಿಯ ಒಳ ನುಗ್ಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ದಿವ್ಯಾ ಮಹಾಜನ ಮತ್ತು ಗಣೇಶ ರಾಠೋಡ ಮೇಲೆ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕದ ನೇತೃತ್ವದಲ್ಲಿ ಹಳಿಯಾಳ ತಹಶೀಲ್ದಾರರ ಕಾರ್ಯಾಲಯದಲ್ಲಿ ತಹಶೀಲ್ದಾರ್ ಪ್ರವೀಣ್ ಹುಚ್ಚಣ್ಣನವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಬುಧವಾರ ಲಿಖಿತ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಸತೀಶ ನಾಯಕ ಬಾವಿಕೇರಿ ಮಾತನಾಡಿ ಸರಕಾರಿ ನೌಕರರಿಗೆ ಕರ್ತವ್ಯದ ಮೇಲೆ ಅಡ್ಡಿಪಡಿಸುವ ಮೂಲಕ ಮಾನಸಿಕವಾಗಿ ದೌರ್ಜನ್ಯ ಮಾಡುತ್ತಿರುವ ಘಟನೆ ಎರಡು ಮೂರು ಬಾರಿ ನಡೆದಿದೆ. ಮೊನ್ನೆ ಫೆ.3ರಂದು ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಯನ್ನು ರಾಜ್ಯ ಸರಕಾರಿ ನೌಕರರ ಸಂಘವು ತೀವ್ರವಾಗಿ ಖಂಡಿಸುತ್ತದೆ. ಈಗಾಗಲೇ ಬಂಧನಕ್ಕೊಳಗಾದ ಆ ಇಬ್ಬರ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರ ಸಂಘದ ಪ್ರಶಾಂತ್ ನಾಯಕ, ಆರೋಗ್ಯ ಇಲಾಖೆಯ ಪೂನಂ ಕೋಟರ್ಕರ್, ಶಶಿಧರ್ ಬುಳ್ಳ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ ಕದಂ ಮತ್ತು ತಾಲೂಕ್ ಆಸ್ಪತ್ರೆ ವೈದ್ಯಾಧಿಕಾರಿಗಳು,ಸಿಬ್ಬಂದಿಗಳು, ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಆಡಳಿತ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.