ಶಿರಸಿ: ಎನ್‍ಪಿಎಸ್ ರದ್ದು ಪಡಿಸಿ ಹಳೇ ಪಿಂಚಣಿ ಯೋಜನೆಯನ್ನೇ ಜಾರಿಗೆ ತರುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮನವಿ ಸಲ್ಲಿಸಲಾಯಿತು.
2022ರ ಜುಲೈ 1 ರಿಂದ ನಮಗೆ ಕೇಂದ್ರ ಸರ್ಕಾರಿ ನೌಕರರ ಸರಿಸಮಾನ ವೇತನ ಜಾರಿಯಾಗಬೇಕು. ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ಶಾಸಕರುಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ್ ಮಾಹಿತಿ ನೀಡಿದರು. ಸಮಾನ ಕೆಲಸಕ್ಕೆ ಸಮಾನ ವೇತನ ತತ್ವದಡಿ ಈಗಾಗಲೇ 25 ರಾಜ್ಯದಲ್ಲಿ ಕೇಂದ್ರ ನೌಕರರ ಸರಿ ಸಮಾನ ವೇತನ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಮಾತ್ರ ಮೀನ ಮೇಷ ಎಣಿಸುತ್ತಿದೆ ಎಂದು ದೂರಿದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಅಲ್ಲದೇ ಶಿಕ್ಷಕರ ಜ್ವಲಂತ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ತಾಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರು ಇದ್ದರು.