ಕಾರವಾರ: ರಾಜ್ಯಾದ್ಯಂತ ಹೆಚ್ಚುತ್ತಿರುವ ಅತ್ಯಾಚಾರ, ಕೊಲೆಯಂಥ ಅಪರಾಧ ಚಟುವಟಿಕೆಗಳಿಂದ ಸ್ವಯಂ ರಕ್ಷಣೆ ಮಾಡಿಕೊಳ್ಳಲು ಹೆಣ್ಣುಮಕ್ಕಳಿಗೆ ಸ್ವ-ರಕ್ಷಣಾ ಕಲೆಗಳ ಅಗತ್ಯವಿದ್ದು, ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಲು ಸರ್ಕಾರ ಮುಂದಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಖಾಸಗಿಯಾಗಿ ಹಲವೆಡೆ ಕರಾಟೆ ತರಬೇತಿಗಳನ್ನು ನೀಡಲಾಗುತ್ತಿದೆ. ಆದರೆ ಸರ್ಕಾರವೇ ಇಂಥ ಸ್ವ-ರಕ್ಷಣಾ ಕಲೆಯನ್ನು ಜಾರಿಗೆ ತರಲು ಮುಂದಾಗಿದೆ. ಹೆಣ್ಣುಮಕ್ಕಳ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಈಗಾಗಲೇ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಕ್ರೈಸ್ಟ್, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ಶಾಲೆಗಳು ಹಾಗೂ ಹಾಸ್ಟೆಲ್‍ಗಳಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ. ಈ ತರಬೇತಿ ಯೋಜನೆಗೆ ಓಬವ್ವ ಆತ್ಮರಕ್ಷಣೆ ಕಲೆ ಎಂದು ಹೆಸರಿಸಲಾಗಿದ್ದು, ಫೆ.7ರಂದು ರಾಜ್ಯದಾದ್ಯಂತ ಇದಕ್ಕೆ ಚಾಲನೆ ನೀಡಲಾಗುತ್ತಿದೆ.
ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆಗಾಗಿ ಈ ಕರಾಟೆ ಶಿಕ್ಷಣ ನೀಡಲಾಗುತ್ತಿದೆ. ರಾಜ್ಯದಾದ್ಯಂತ ಸುಮಾರು 1702 ವಸತಿ ಶಾಲೆ ಮತ್ತು ಹಾಸ್ಟೆಲ್‍ಗಳಲ್ಲಿ ಸುಮಾರು ಎರಡು ಲಕ್ಷ ವಿದ್ಯಾರ್ಥಿನಿಯರಿಗೆ ಈ ಕರಾಟೆ ತರಬೇತಿ ನೀಡಲಾಗುತ್ತದೆ. ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪಡೆದಿರುವ ಮಹಿಳಾ ತರಬೇತುದಾರರ ಮೂಲಕವೇ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.