
ಹೊನ್ನಾವರ: ತಾಲೂಕಾ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪೋಕ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸಿದ ಜಿಲ್ಲಾ ನ್ಯಾಯಾಲಯ, ಆರೋಪ ಸಾಬೀತಾದ ಹಿನ್ನಲೆಯಲ್ಲಿ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ 42 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದೆ.
ತಾಲೂಕಿನ ಕೊಡಾಣಿಯ ನಿತೇಶ ಬೆನಿಶ್ ಹೊರ್ಟಾ (26) ಪೋಕ್ಸ್ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಿ.ಪಿ.ಐ ಚೆಲುವರಾಜು ಹಾಗೂ ವಸಂತ ಆಚಾರಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸಿ.ಪಿ.ಐ ಶ್ರೀಧರ ಎಸ್.ಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಹೆಚ್ಚುವರಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಅಪರಾಧ ವಿಭಾಗದ ಪಿ.ಎಸ್.ಐ ಸಾವಿತ್ರಿ ನಾಯಕ ಅವರು ಪ್ರಕರಣ ದಾಖಲಿಸಿಕೊಂಡಿದ್ದರು. ಸಿ.ಹೆಚ್.ಸಿ ರಮಾನಂದ ನಾಯ್ಕ ತನಿಖೆಗೆ ಸಹಾಯ ಮಾಡಿದ್ದರು, ಪಿ.ಎಸ್.ಐ ಶಶಿಕುಮಾರ್, ಎ.ಎಸ್.ಐ ಜ್ಞಾನೇಶ್ವರ ಹರಿಕಾಂತ ಸಾಕಷ್ಟು ಮುತುವರ್ಜಿ ವಹಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸುಭಾಷ್ ಕೈರನ್ ವಾದಿಸಿದ್ದರು. ಪ್ರಕರಣ ಸೂಕ್ತ ತನಿಖೆ ನಡೆಸಿ ಆರೋಪಿಗೆ ಶಿಕ್ಷೆಯಾಗುವಂತೆ ಶ್ರಮಿಸಿದ ಪೊಲೀಸ್ ಅಧಿಕಾರಿಗಳನ್ನು ಎಸ್ಪಿ ಶಿವಪ್ರಕಾಶ ದೇವರಾಜು ಅವರು ಅಭಿನಂದಿಸಿದ್ದಾರೆ.