ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಏ.23ರಿಂದ ಆರಂಭವಾಗುತ್ತಿದ್ದು ಮೇ 18 ರ ವರೆಗೂ ಪರೀಕ್ಷೆಗಳು ನಡೆಯಲಿವೆ.
ಈ ಬಾರಿ ಒಟ್ಟು 6,84,255 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು ಇದರಲ್ಲಿ ಬಾಲಕರು 3,46,936, ಬಾಲಕಿಯರು 3,37,319 ಇದ್ದಾರೆ. ಸಕ್ರಿಯ ವಿದ್ಯಾರ್ಥಿಗಳು 6,00,519, ಪುನರಾವರ್ತಿತ ವಿದ್ಯಾರ್ಥಿಗಳು 61,808, ಖಾಸಗಿ ವಿದ್ಯಾರ್ಥಿಗಳು 21,928 ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ.
ರಾಜ್ಯಾದ್ಯಂತ ಒಟ್ಟು 1076 ಪರೀಕ್ಷಾ ಕೇಂದ್ರಗಳು;
ಪರೀಕ್ಷಾ ಕೊಠಡಿಗಳಲ್ಲಿ ಅಕ್ರಮಗಳನ್ನು ತಡೆಯಲು ಸಿಸಿಟಿವಿ ಕಣ್ಗಾವಲು ಇಡಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಫೋಟೋಕಾಪಿ ಶಾಪ್ ಬಂದ್ ಇರಲಿದೆ.
ಪಿಯುಸಿ ಪರೀಕ್ಷೆಗೂ ಹಿಜಾಬ್ ಅನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಯಾವುದೇ ಧರ್ಮ ಸೂಚಕ ಬಟ್ಟೆಗಳನ್ನು ಧರಿಸಲು ಅವಕಾಶವಿಲ್ಲ ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ.