ದಾಂಡೇಲಿ: ನನ್ನ ವಿಧಾನಸಭಾ ಕ್ಷೇತ್ರದ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಸಿಎಸ್‍ಆರ್ ಯೋಜನೆಯ ಮೂಲಕ ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸಲಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಒಳ್ಳೆಯ ಮೂಲಭೂತ ಸೌಕರ್ಯಗಳೊಂದಿಗೆ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸಬೇಕೆಂಬುದೆ ನನ್ನ ಆಶಯವಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ನಗರದ ಬಾಂಚೆಬಾಳ ಹಾಗೂ ಗಾಂಧಿನಗರದಲ್ಲಿ ತಲಾ ರೂ.10.80 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಸೋಮವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಸರಕಾರಿ ಅಂಗನವಾಡಿ ಕೇಂದ್ರಗಳಿಗೆ ಬಡವರ ಮಕ್ಕಳೆ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿರುವುದರಿಂದ ಖಾಸಗಿ ನರ್ಸರಿ ಕೇಂದ್ರಗಳಲ್ಲಿರುವ ಸೌಲಭ್ಯಗಳಂತೆ ಸರಕಾರಿ ಅಂಗನವಾಡಿ ಕೇಂದ್ರಗಳಲ್ಲಿಯೂ ಸಹ ಮಕ್ಕಳ ಬೆಳವಣಿಗೆಗೆ ಹಾಗೂ ಉನ್ನತಿಗಾಗಿ ಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ, ಸ್ಥಾಯಿ ಸಮಿತಿ ಅಧ್ಯಕ್ಷ ಮೌಲಾಲಿ ಮುಲ್ಲಾ, ಸ್ಥಳೀಯ ನಗರ ಸಭಾ ಸದಸ್ಯೆ ರುಕ್ಮಿಣಿ ಬಾಗಾಡೆ, ಪೌರಾಯುಕ್ತರಾದ ಆರ್.ಎಸ್.ಪವಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಕ್ಷ್ಮೀದೇವಿ ಮುಂತಾದವರಿದ್ದರು.