ಕಾರವಾರ: ಮಹಿಳೆಯರ ಏಳಿಗೆಗಾಗಿ ಶ್ರಮಿಸಿದವರಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಪಾತ್ರ ಗಮನಾರ್ಹವಾದುದಾಗಿದೆ ಎಂದು ಡಿಯುಡಿಸಿ ತಹಶೀಲ್ದಾರ ಆರ್.ವಿ.ಕಟ್ಟಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಮಹಿಳೆಯರ ವಿದ್ಯಾಭ್ಯಾಸಕ್ಕೆ ಮತ್ತು ಅವರ ಹಕ್ಕುಗಳಿಗಾಗಿ ಹೋರಾಡಿದ ಮಹನೀಯರಲ್ಲಿ ಹೇಮರೆಡ್ಡಿ ಮಲ್ಲಮ್ಮ ಸಹ ಒಬ್ಬರು. ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಹಾಗೂ ಶೋಷಿತ, ದಮನಿತರ ಏಳಿಗೆಯನ್ನು ಬಯಸಿ ಸಮಾಜದ ವಿರುದ್ಧ ಹೋರಾಡಿದ ಮಲ್ಲಮ್ಮನ ಕಾರ್ಯ ಶ್ಲಾಘನೀಯವಾದುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಡಿಎಲ್‍ಆರ್ ರಾಜು ಪೂಜಾರಿ, ಮುಜರಾಯಿ ಇಲಾಖೆ ತಹಶೀಲ್ದಾರ ಸುಧಾ ತಳವಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನರೇಂದ್ರ ನಾಯಕ್ ಮತ್ತು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಇದ್ದರು.