ಕಾರವಾರ; ಡೆಂಘೀ ಜ್ವರವು ವೈರಸ್‌ನಿಂದ ಉಂಟಾಗುವ ಕಾಯಿಲೆಯಾಗಿದ್ದು, ಸೋಂಕು ಹೊಂದಿದ ಈಡಿಸ್ ಇಜಿಪ್ಟ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಡೆಂಘೀ ಬರದಂತೆ ತಡೆಗಟ್ಟಲು ಸೊಳ್ಳೆಗಳ ನಿಯಂತ್ರಣವೊಂದೇ ಉಪಾಯವಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಉಷಾ ಹಾಸ್ಯಗಾರ ಹೇಳಿದರು.
ಅವರು ರಾಷ್ಟ್ರೀಯ ಡೆಂಘೀ ದಿನದ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾಸ್ತಾವಿಕ ಮಾತುಗಳನಾಡಿ, ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಲಸಿಕೆ ಅಥವಾ ಔಷಧಿ ಇರುವುದಿಲ್ಲ. ಹೀಗಾಗಿ ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರಿಂದ ಚಿಕಿತ್ಸೆ ಪಡೆಯಬೇಕಾಗಿದೆ. ಈಡಿಸ್ ಇಜಿಪ್ಟ್ ಸೊಳ್ಳೆ ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತದೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತದೆ.ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಡ್ರಮ್ಮು, ಬ್ಯಾರೆಲ್, ಮಣ್ಣಿನ ಮಡಿಕೆ ಮುಂತಾದ ಕಡೆ ಶೇಖರವಾಗುವ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಈ ರೀತಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಸೊಳ್ಳೆಗಳಿಂದ ಕಚ್ಚಿಸಿಕೊಳ್ಳದಂತೆ ಮತ್ತು ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಿವುದು ಉತ್ತಮ ಎಂದು ಹೇಳಿದರು.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ ಕಿಣಿ, ಮಳೆಗಾಲ ಪ್ರಾರಂಭದ ದಿನಗಳು ಶೀತಜ್ವರದಿಂದ ಬಳಲುವರು ನಿರ್ಲಕ್ಯ ವಹಿಸದೆ ವೈದ್ಯಾಧಿಕಾರಿಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು. ಆರೋಗ್ಯ ಕಾರ್ಯಕರ್ತರು ಸಾರ್ವಜನಿಕರಿಗೆ ಡೆಂಘೀ ಜ್ವರದ ಬಗ್ಗೆ ಅರಿವು ಮೂಡಿಸಬೇಕು. ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಜವಾಬ್ದಾರಿ ಹೆಚ್ಚಾಗಬೇಕಿದೆ. ಸ್ವಚ್ಛತೆಯೊಂದೇ ಇಂತಹ ಕಾಯಿಲೆಗಳಿಂದ ದೂರ ಇರಲು ಸಾಧ್ಯವಾಗಲಿದೆ. ಎಲ್ಲರೂ ಕೈ ಜೋಡಿಸುವ ಮೂಲಕ ಡೆಂಘೀ ತಡೆಗಟ್ಟಬಹುದು ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚಿದಾನಂದ ಎಸ್., ವಿನಾಯಕ ಆಚಾರಿ, ಗಣೇಶ ಬಳಕೂರು, ಸೈಯದ್ ಇರ್ಷಾದ್ ಕಾರ್ಯಕ್ರಮದಲ್ಲಿ ಹಾಜರಿದ್ದು ಸಹಕರಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಆನಂದ ಶೇಟ್ ಕಾರ್ಯಕ್ರಮ ನಿರೂಪಿಸಿದರು. ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿತು. ಜಾಥಾದಲ್ಲಿ ಆಶಾ ಕಾರ್ಯಕ್ರತೆಯರು , ಸಮುದಾಯ ಆರೋಗ್ಯಾಧಿಕಾರಿಗಳು ಭಾಗವಹಿಸಿದ್ದರು.