ಕಾರವಾರ: ವಿಶ್ವ ಯೋಗ ದಿನದಂದು ಯಾವುದೇ ಸಮಸ್ಯೆ ಆಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎಂಟನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಯೋಗ ದಿನವನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಆಚರಿಸಬೇಕು ಇದರಿಂದ ಹೆಚ್ಚಿನ ಜನರು ಭಾಗವಹಿಸಲು ಸಾಧ್ಯ ಎಂದು ಹೇಳಿದರು.
ಜಿಲ್ಲೆಯ ಮೂರು ಕಡೆಗಳಲ್ಲಿ ಕಾರವಾರ, ಭಟ್ಕಳ, ಶಿರಸಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯೋಗ ದಿನದಂದು ಮುಂಜಾನೆ 6ರಿಂದ 7 ಗಂಟೆಯವರೆಗೆ ಯೋಗವನ್ನು ನಡೆಸಲಾಗುತ್ತದೆ. ಎಲ್ಲಾ ವಸತಿ ಶಾಲೆ, ಶಿಕ್ಷಣ ಸಂಸ್ಥೆಗಳು ಇದರಲ್ಲಿ ಭಾಗವಹಿಸುವಂತೆ ಹೇಳಿದರು. ಬಂದವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಹಾಗೂ ಬರುವಂತಹ ಮಕ್ಕಳಿಗೆ, ಸಾರ್ವಜನಿಕರಿಗೆ ಮೊದಲೇ ಯೋಗದ ಕುರಿತು ತರಬೇತಿ ನೀಡುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ., ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬದರಿನಾಥ್, ಶಿರಸಿ, ಭಟ್ಕಳ ಉಪವಿಭಾಗಾಧಿಕಾರಿಗಳು, ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿ, ಸಿಬ್ಬಂದಿ ಇದ್ದರು.