ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ)ಯ ಅಧ್ಯಕ್ಷರು ಹಾಗೂ ಲೋಕಸಭಾ ಸದಸ್ಯರಾದ ಅನಂತಕುಮಾರ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆ ಹಾಗೂ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಸೋಮವಾರದಂದು ಜರುಗಿತು.

ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಂಸದ ಅನಂತಕುಮಾರ್ ಹೆಗಡೆ ನರೇಗಾದಡಿ ಸರಕಾರಿ ಆಸ್ತಿ ಸೃಜನೆಯೊಂದಿಗೆ ಗ್ರಾಮೀಣಜನರು ಗುಳೆ ಹೋಗುವುದನ್ನು ತಪ್ಪಿಸಿ ದುಡಿಯುವ ಕೈಗಳಿಗೆ ಸ್ಥಳೀಯವಾಗಿ ಕೆಲಸ ನೀಡಬೇಕು. ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜ್ಞಾನಧಾರಿತ ಉದ್ದಿಮೆ ಹಾಗೂ ಕೌಶಲ್ಯ ವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಕಾರವಾರ ಶಾಸಕರಾದ ರೂಪಾಲಿ ನಾಯ್ಕ್, ಭಟ್ಕಳ ಶಾಸಕ ಸುನೀಲ್ ನಾಯ್ಕ್ ,ವಿಧಾನ ಪರಿಷತ್ತು ಸದಸ್ಯ ಗಣಪತಿ ಉಳ್ವೇಕರ್, ಪ್ರಮೋದ ಹೆಗಡೆ, ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ, ಮಾನ್ಯ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ, ಅವರು ಸೇರಿದಂತೆ ಜಿಲ್ಲಾ ಪಂಚಾಯತ್‌ನ ವಿವಿಧ ವಿಭಾಗಗಳ ಮುಖ್ಯಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.