ಕುಮಟಾ: ಕನ್ನಡ ಶಾಲೆಯ ವಿಧ್ಯಾರ್ಥಿಗಳಿಗೆ ಅವರ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸರಕಾರ ಅನೇಕ ಯೋಜನೆಗಳನ್ನು ನೀಡುತ್ತಿದೆ. ಅವುಗಳ ಜೊತೆಗೆ ಕನ್ನಡ ಸಂಘಟನೆಯಿಂದ ಪಠ್ಯ- ಪುಸ್ತಕ ನೀಡುವ ಇಂತಹ ಕಾರ್ಯಕ್ರಮ ಹಮ್ಮಿಕೊಂಡು ಮಕ್ಕಳ ಶೈಕ್ಷಣಿಕ ಆಸಕ್ತಿ ಇನ್ನಷ್ಟು ಹೆಚ್ಚಿಸುತ್ತಿರುವುದು ಅಭಿನಂದನಾರ್ಹ ಎಂದು ವೈದ್ಯ ಡಾ.ಜಿ.ಜಿ.ಹೆಗಡೆ ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲೂಕಿನ ಸರಕಾರಿ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ನಾಮಧಾರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಅವರು ಮಾತನಾಡಿ,ಕರ್ನಾಟಕ ರಕ್ಷಣಾ ವೇದಿಕೆಯಿಂದ ಇನ್ನಷ್ಟು ಜನಪರ ಕಾರ್ಯಗಳು ನಡೆಯುತ್ತಿರಲಿ ಎಂದು ಹಾರೈಸಿದರು.
ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಅವರ ಬಣದಿಂದ ಪ್ರತಿವರ್ಷ ಕನ್ನಡ ಶಾಲಾ ವಿಧ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ನೀಡಲಾಗುತ್ತಿದೆ. ಇದರಿಂದ ಬಡತನದಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳಿಗೆ ಬಹಳಷ್ಟು ಪ್ರಯೋಜನ ಆಗಲಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ನೆರವು ನೀಡುವ ಯೋಚನೆ ಹೊಂದಿದ್ದು ಎಲ್ಲರ ಸಹಕಾರ ಇರಲಿ ಎಂದರು.
ಕಸಾಪ ತಾಲೂಕಾಧ್ಯಕ್ಷ ಸುಬ್ಬಯ್ಯ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಐ ಈಶ್ವರ ನಾಯ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜೆಡಿಎಸ್ ಮುಖಂಡ ಸೂರಜ್ ನಾಯ್ಕ, ಕಾಂಗ್ರೆಸ್ ಪ್ರಮುಖ ಪ್ರದೀಪ್ ನಾಯಕ್, ಶಿವಾನಂದ ಹೆಗಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ್, ಧೀರೂ ಶಾನಭಾಗ, ಶ್ರೀಧರ ಗೌಡ, ಹೊನ್ನಪ್ಪ ನಾಯಕ, ಕರವೇ ಪದಾಧಿಕಾರಿಗಳು ಸೇರಿದಂತೆ ಅನೇಕರಿದ್ದರು.