ದಾಂಡೇಲಿ: ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಿ.ಎಸ್.ಆರ್ ಯೋಜನೆಯಡಿ ನಗರದ 13ನೇ ವಾರ್ಡಿನಲ್ಲಿ ಬರುವ 14ನೇ ಬ್ಲಾಕ್ ಮತ್ತು ಟೌನ್‌ಶಿಪ್ ಉದ್ಯಾನವನದಲ್ಲಿ ತಲಾ ರೂ.19 ಲಕ್ಷ ಮೊತ್ತದಲ್ಲಿ ನೂತನವಾಗಿ ನಿರ್ಮಾಣಗೊಂಡ ಎರಡು ಅಂಗನವಾಡಿ ಕೇಂದ್ರಗಳನ್ನು ಶಾಸಕ ಆರ್.ವಿ.ದೇಶಪಾಂಡೆ ಶುಕ್ರವಾರ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಅಂಗನವಾಡಿ ಕೇಂದ್ರಗಳು ಭದ್ರ ಅಡಿಪಾಯ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯಗಳನ್ನು ಒದಗಿಸಿಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಇಲ್ಲಿ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯವರು ಸಿಎಸ್‌ಆರ್ ಯೋಜನೆಯಡಿ ಈಗಾಗಲೆ ಎರಡು ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಿ ಕೊಟ್ಟು, ಮುಂದಿನ ದಿನಗಳಲ್ಲಿ ಮತ್ತೇ ಮೂರು ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಿಕೊಡಲು ಮುಂದಾಗಿದ್ದಾರೆ. ಮೂರಲ್ಲ ಅದಕ್ಕಿಂತಲೂ ಹೆಚ್ಚು ಅಂಗನವಾಡಿ ಕೇಂದ್ರಗಳನ್ನು ದಾಂಡೇಲಿಯಲ್ಲಿ ಕಾಗದ ಕಾರ್ಖಾನೆಯವರು ಕಟ್ಟಿಸಿಕೊಡುವಂತೆ ಹೇಳಿ, ನೂತನ ಕಟ್ಟಡದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಸುಕನ್ಯಾ ಸಮೃದ್ಧಿ ಯೋಜನೆಯ ಉಳಿತಾಯ ಖಾತೆಯ ಪುಸ್ತಕವನ್ನು ದೇಶಪಾಂಡೆ ವಿತರಿಸಿದರು. ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯ ಮೋಹನ ಹಲವಾಯಿ, ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಲಕ್ಷ್ಮೀದೇವಿ, ಬ್ಲಾಕ್ ಕಾಂಗ್ರೆಸ್ ಪ್ರಭಾರಿ ಅಧ್ಯಕ್ಷರಾದ ವಿ.ಆರ್.ಹೆಗಡೆ, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ, ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಅಧಿಕಾರಿಗಳಾದ ಸಂಜಯ್ ಹುಕ್ಕೇರಿಕರ, ಕೃಷ್ಣ ಕುಲಕರ್ಣಿ, ಖಲೀಲ್ ಕುಲಕರ್ಣಿ, ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಅನುಸೂಯ ರೇಡೆಕರ, ನಗರ ಸಭಾ ಸದಸ್ಯರುಗಳು, ಕಾಂಗ್ರೆಸ್ ಮುಖಂಡರುಗಳು, ಅಂಗನವಾಡಿ ಕೇಂದ್ರಗಳ ಕಾರ‍್ಯಕರ್ತೆಯರು ಉಪಸ್ಥಿತರಿದ್ದರು. ಕಾರ‍್ಯಕ್ರಮದಲ್ಲಿ ನಗರ ಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.